ಬೆಂಗಳೂರು | ವೈದ್ಯಕೀಯ ಕಾಲೇಜಿನ 47 ವಿದ್ಯಾರ್ಥಿನಿಯರು ಅಸ್ವಸ್ಥ : ಆಸ್ಪತೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಮಹಿಳಾ ಆಯೋಗ

Photo : indiatodayne.in
ಬೆಂಗಳೂರು: ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ (ಬಿಎಂಸಿಆರ್ ಐ) ಮಹಿಳಾ ಹಾಸ್ಟೆಲ್ನ 47 ವಿದ್ಯಾರ್ಥಿನಿಯರು ವಾಂತಿ-ಭೇದಿಯಿಂದ ಅಸ್ವಸ್ಥಗೊಂಡು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾದ ಹಿನ್ನೆಲೆ, ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಆಸ್ಪತ್ರೆಗೆ ಶನಿವಾರ ಭೇಟಿ ನೀಡಿ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ್ದಾರೆ.
ವೈದ್ಯಕೀಯ ಕಾಲೇಜಿನ ಹಾಸ್ಟೆಲ್ಗೂ ಡಾ.ನಾಗಲಕ್ಷ್ಮಿ ಅವರು ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆಯ ಬಗ್ಗೆ, ಕುಡಿಯುವ ನೀರು, ಶೌಚಾಲಯ, ಕೋಣೆಗಳು ಸ್ವಚ್ಛತೆಯಿಂದ ಕೂಡಿರದೇ ಇರುವುದನ್ನು ಕಂಡು ಸಂಬಂಧಪಟ್ಟ ಅಧಿಕಾರಿಗಳನ್ನು ಪ್ರಶ್ನಿಸಿ ಕೂಡಲೇ ಕ್ರಮ ವಹಿಸುವಂತೆ ಸೂಚಿಸಿದರು. ಕೂಡಲೇ ಸರಕಾರದ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರಿಗೆ ಕರೆ ಮಾಡಿ ಸಂಬಂಧಪಟ್ಟ ಅಧಿಕಾರಿ ಮತ್ತು ಸಿಬ್ಬಂದಿ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ಆದೇಶಿಸಿದರು.
ಘಟನೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈದ್ಯಕೀಯ ಶಿಕ್ಷಣಕ್ಕೆ ಹೆಸರಾಗಿರುವ ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯದ ಮಹಿಳಾ ಹಾಸ್ಟೆಲ್ನಲ್ಲಿ ನಡೆದಿರುವ ಈ ಅವ್ಯವಸ್ಥೆಯನ್ನು ರಾಜ್ಯ ಮಹಿಳಾ ಆಯೋಗವು ತೀವ್ರವಾಗಿ ಖಂಡಿಸುತ್ತದೆ ಎಂದರು.
ವೈದ್ಯಕೀಯ ಮಹಾವಿದ್ಯಾಲಯವು ಮೂರು ವರ್ಷಗಳಿಂದ ಮಹಿಳಾ ಹಾಸ್ಟೆಲ್ನಲ್ಲಿ ನೀಡಿರುವ ಸೌಲಭ್ಯದ ಬಗ್ಗೆ ವಿವರವಾದ ವರದಿಯನ್ನು ನೀಡಿ ಹಾಗೂ ಆಸ್ಪತ್ರೆಗೆ ದಾಖಲಾಗಿರುವ ವಿದ್ಯಾರ್ಥಿನಿಯರ ಸಂಪೂರ್ಣ ಮಾಹಿತಿಯನ್ನು ನೀಡಬೇಕು. ಅಲ್ಲದೆ, ಮುಂದೆಂದೂ ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಾದ ನಿರ್ದೇಶನ ನೀಡಿ, ಈ ಅವ್ಯವಸ್ಥೆಗೆ ಕಾರಣಕರ್ತರಾಗಿರುವ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ತಿಳಿಸಿದರು.
ಬಿಎಂಸಿಆರ್ ಐ ಹಾಸ್ಟೆಲ್ನಲ್ಲಿ ಕನಿಷ್ಠ ಸ್ವಚ್ಛತೆಯಿಲ್ಲದ ಬಗ್ಗೆ ಹಲವು ಬಾರಿ ವಿದ್ಯಾರ್ಥಿಗಳು ದೂರು ನೀಡಿದ್ದಾರೆ. ಯಾವುದು ಸರಿಯಾಗಿಲ್ಲ. ಈ ಬಗ್ಗೆ ನಾನು ಡಾಕ್ಯುಮೆಂಟ್ ಕೇಳಿದ್ದೇನೆ. ಅಲ್ಲದೆ, ಒಂದು ವಾರದಲ್ಲಿ ಸಮಸ್ಯೆ ಬಗೆಹರಿಸಲು ಹೇಳಿದ್ದೇನೆ. ಕೋಣೆಗಳು ಚಿಕ್ಕದಾಗಿವೆ. ಸರಿಯಾದ ವ್ಯವಸ್ಥೆ ಇಲ್ಲ. ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ವಿಕ್ಟೋರಿಯಾ ಆಸ್ಪತ್ರೆಯಿಂದ ಊಟ ಹೋಗುತ್ತದೆ. ಈ ಬಗ್ಗೆ ನಾನು ವೈದ್ಯಕೀಯ ಶಿಕ್ಷಣ ಸಚಿವರ ಗಮನಕ್ಕೆ ತರುತ್ತೇನೆ. ಪ್ರತಿಯೊಂದು ಆಸ್ಪತ್ರೆ ಹಾಗೂ ವಸತಿ ನಿಲಯಕ್ಕೆ ಭೇಟಿ ನೀಡುತ್ತೇನೆ. ಅಲ್ಲಿನ ಸಮಸ್ಯೆ ಬಗ್ಗೆ ತಿಳಿಯುತ್ತೇನೆ. ಈಗ ಸುಮೋಟೋ ಪ್ರಕರಣ ದಾಖಲಾಗಿದೆ ಎಂದು ಡಾ.ನಾಗಲಕ್ಷ್ಮೀ ಚೌಧರಿ ತಿಳಿಸಿದರು.
ಕರ್ನಾಟಕ ಆರೋಗ್ಯ ಇಲಾಖೆ ರಾಜ್ಯದಲ್ಲಿ ಈ ವರ್ಷ ಇದುವರೆಗೆ ಆರು ಕಾಲರಾ ಪ್ರಕರಣಗಳು ವರದಿಯಾಗಿವೆ. ಅದರಲ್ಲಿ ಐದು ಮಾರ್ಚ್ನಲ್ಲಿ ವರದಿಯಾಗಿದೆ. ನೀರಿನ ಬಿಕ್ಕಟ್ಟಿನೊಂದಿಗೆ ತೀವ್ರವಾದ ಶಾಖವು ಕಾಲರಾ ಏಕಾಏಕಿ ಭೀತಿಗೆ ಕಾರಣವಾಗಿದೆ. ಚಿಕಿತ್ಸೆ ಪಡೆಯುತ್ತಿರುವ ಎಲ್ಲ ವಿದ್ಯಾರ್ಥಿನಿಯರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿರುವುದಾಗಿ ಡಾ.ನಾಗಲಕ್ಷ್ಮಿ ಚೌಧರಿ ಹೇಳಿದರು.







