ದೇವನಹಳ್ಳಿ | 48 ಕೋಟಿ ರೂ. ಮೌಲ್ಯದ ಗಾಂಜಾ ವಶ: ನಾಲ್ವರ ಬಂಧನ

ದೇವನಹಳ್ಳಿ : ತಾಲೂಕಿನ ಕೆಂಪೇಗೌಡ ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 4 ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 48.57 ಕೆ.ಜಿ ತೂಕದ ಗಾಂಜಾವನ್ನು ವಶಪಡಿಸಿಕೊಂಡು ನಾಲ್ವರು ಪ್ರಯಾಣಿಕರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿರುವ ಬಗ್ಗೆ ವರದಿಯಾಗಿದೆ.
ಕೆಂಪೇಗೌಡ ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಒಂದು ವಾರದಿಂದ ಗಾಂಜಾ ಮತ್ತು ಇತರ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ನಾಲ್ಕು ಪ್ರಕರಣಗಳಲ್ಲಿಯೂ ಬ್ಯಾಂಕಾಕ್‌ನಿಂದ ಆಗಮಿಸಿದ ಪ್ರಯಾಣಿಕರಿಂದಲೇ ಹೈಡ್ರೋ ಗಾಂಜಾ, ಗಾಂಜಾ ಸೊಪ್ಪನ್ನು ವಶಕ್ಕೆ ಪಡೆದುಕೊಂಡಿದ್ದು, ಅಂತರ್‌ರಾಷ್ಟ್ರೀಯ ಮಾರುಕಟ್ಟೆಯಲ್ಲಿ ವಶಕ್ಕೆ ಪಡೆದ ಗಾಂಜಾದ ಒಟ್ಟು ಮೌಲ್ಯ 48 ಕೋಟಿ ರೂ.ಎಂದು ಅಂದಾಜಿಸಲಾಗಿದೆ.
ಕಾರ್ಯಾಚರಣೆಯಲ್ಲಿ ಒಟ್ಟು ನಾಲ್ವರು ಪ್ರಯಾಣಿಕರನ್ನು ಬಂಧಿಸಿರುವ ಕಸ್ಟಮ್ಸ್ ಅಧಿಕಾರಿಗಳು, ಅವರ ವಿರುದ್ಧ ಮಾದಕ ವಸ್ತು ನಿಷೇಧ ಕಾಯ್ದೆ (ಎನ್‌ಡಿಪಿಎಸ್) ಅಡಿಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ. ಮಾದಕ ವಸ್ತುಗಳ ವಿರೋಧಿ ಅಭಿಯಾನದ ಅಡಿಯಲ್ಲಿ ಕಾರ್ಯಾಚರಣೆ ಜಾರಿಯಲ್ಲಿರುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.





