ನಟಿ ರಮ್ಯಾಗೆ ಅಶ್ಲೀಲ ಸಂದೇಶ ಪ್ರಕರಣ : ಬಂಧಿತರ ಸಂಖ್ಯೆ 9ಕ್ಕೆ ಏರಿಕೆ

ಸಾಂದರ್ಭಿಕ ಚಿತ್ರ | PC: Meta Ai
ಬೆಂಗಳೂರು, ಆ.19: ಮಾಜಿ ಸಂಸದೆ ಹಾಗೂ ನಟಿ ರಮ್ಯಾಗೆ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಿಬ್ಬರು ಆರೋಪಿಗಳನ್ನು ಸಿಸಿಬಿಯ ಸೈಬರ್ ಕ್ರೈಂ ವಿಭಾಗದ ಪೊಲೀಸರು ಬಂಧಿಸಿರುವುದಾಗಿ ತಿಳಿಸಿದ್ದಾರೆ.
ಉಡುಪಿ ಮೂಲದ ಆದರ್ಶ್ ಮತ್ತು ಸಂಜಯ್ ಎಂಬುವವರನ್ನು ಬಂಧಿಸಲಾಗಿದ್ದು, ಪ್ರಕರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.
ನಟ ದರ್ಶನ್ ಅವರ ಅಭಿಮಾನಿಗಳು ಎಂದು ಹೇಳಿಕೊಂಡು ಅಶ್ಲೀಲ ಸಂದೇಶ ರವಾನೆ, ಕಾಮೆಂಟ್ ಮಾಡುತ್ತಿದ್ದವರ ವಿರುದ್ಧ ಜುಲೈ 28ರಂದು ಖುದ್ದು ನಟಿ ರಮ್ಯಾ ಅವರೇ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಹಾಗೂ ಸೈಬರ್ ಕ್ರೈಂ ಠಾಣೆಗೆ ತೆರಳಿ ದೂರು ನೀಡಿದ್ದರು.
ರಮ್ಯಾ ನೀಡಿದ ದೂರಿನ ಅನ್ವಯ ಮಾಹಿತಿ ತಂತ್ರಜ್ಞಾನ ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆ ಕಾಯ್ದೆಯ ಸೆಕ್ಷನ್ಗಳಾದ 2023ರ 351(2), 351(3), 352, 75(1) 75(1)(Iಗಿ) ಹಾಗೂ 79 ಅಡಿಯಲ್ಲಿ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಬಳಿಕ ಓಬಣ್ಣ, ಗಂಗಾಧರ್, ರಾಜೇಶ್, ಭುವನ್ಗೌಡ, ಮಂಜುನಾಥ್, ಪ್ರಮೋದ್ ಗೌಡ ಹಾಗೂ ಸಂತೋಷ್ ಎಂಬ ಏಳು ಆರೋಪಿಗಳನ್ನು ಬಂಧಿಸಲಾಗಿತ್ತು. ಇದೀಗ ಮತ್ತಿಬ್ಬರನ್ನು ಬಂಧಿಸಲಾಗಿದೆ.





