ಸೆ.15ರಿಂದ ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ

ಸಾಂದರ್ಭಿಕ ಚಿತ್ರ
ಬೆಂಗಳೂರು, ಸೆ.12: ಮೊದಲ ಬಾರಿಗೆ ರಾಜ್ಯಾದ್ಯಂತ ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಸಮೀಕ್ಷೆ ಹಾಗೂ 15 ಜಿಲ್ಲೆಗಳಲ್ಲಿ ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆಯನ್ನು ಸೆ.15ರಿಂದ ಆರಂಭಿಸಿ 45 ದಿನಗಳ ಕಾಲ ನಡೆಸಲಾಗುತ್ತಿದೆ.
ಸಮೀಕ್ಷೆಯು ಬೆಳಗಾವಿ, ವಿಜಯಪುರ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಧಾರವಾಡ, ಹಾವೇರಿ, ಗದಗ, ಕಲಬುರ್ಗಿ, ಯಾದಗಿರಿ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸದರಿಯವರ ಸಾಮಾಜಿಕ, ಆರ್ಥಿಕ ಸ್ಥಿತಿಗತಿ ಕುರಿತಂತೆ ನಿಖರ ಮಾಹಿತಿ ಸಂಗ್ರಹಿಸಿ, ಪುನರ್ವಸತಿ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ವ್ಯವಸ್ಥೆ ಕಲ್ಪಿಸುವ ಸಂಬಂಧ ಎರಡೂ ಸಮೀಕ್ಷೆಗಳನ್ನು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ನಡೆಸಲಾಗುವುದು ಎಂದು ತಿಳಿಸಲಾಗಿದೆ.
ಸಮೀಕ್ಷೆ ಕಾರ್ಯ ಕೈಗೊಳ್ಳಲು ಈಗಾಗಲೇ ಪೂರ್ವ ತಯಾರಿ ಮಾಡಿಕೊಂಡಿದ್ದು, ಮೊಬೈಲ್ ಆಪ್ ಮೂಲಕ ಟ್ರಾನ್ಸ್ ಜೆಂಡರ್ಸ್ ಸಮೀಕ್ಷೆಗೆ ‘KARMANI Web Application’ ಅನ್ನು ಸಿದ್ಧಪಡಿಸಿಲಾಗಿದೆ ಹಾಗೂ ಮಾಜಿ ದೇವದಾಸಿ ಮಹಿಳೆಯರ ಮರುಸಮೀಕ್ಷೆಗೆ ಸೇವಾ ಸಿಂಧು ಮೂಲಕ ‘ಮಾಜಿ ದೇವದಾಸಿ ಮಹಿಳೆಯರ ಮರುಸಮೀಕ್ಷೆ’ web application ಅನ್ನು ಸಿದ್ಧಪಡಿಸಿಲಾಗಿದೆ. ಈ ಮೂಲಕ ಪ್ರತ್ಯೇಕವಾಗಿ ಎರಡು ಸಮೀಕ್ಷೆಗಳನ್ನು ಕೈಗೊಳ್ಳಲಾಗುತ್ತದೆ.
ಎಲ್ಲ ರೀತಿಯ ಮೂಲಭೂತ ಸೌಕರ್ಯಗಳೊಂದಿಗೆ, ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಸಮೀಕ್ಷೆಯನ್ನು ರಾಜ್ಯದ ಎಲ್ಲ ತಾಲೂಕು ಸರಕಾರಿ ಆಸ್ಪತ್ರೆಗಳು ಮತ್ತು ಜಿಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿ ನಡೆಸಲಾಗುತ್ತದೆ ಹಾಗೂ ಮಾಜಿ ದೇವದಾಸಿ ಮಹಿಳೆಯರ ಮರುಸಮೀಕ್ಷೆಯನ್ನು 15 ಜಿಲ್ಲೆಗಳ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ನಡೆಸಲಾಗುತ್ತದೆ.
ಲಿಂಗತ್ವ ಅಲ್ಪಸಂಖ್ಯಾತರ ಸಮುದಾಯದವರ ಮೂಲಕವೇ ಸಮೀಕ್ಷೆ ಕಾರ್ಯ ಕೈಗೊಳ್ಳುತ್ತಿರುವುದು ಸಮೀಕ್ಷೆಯ ವಿಶೇಷತೆಯಾಗಿದೆ ಹಾಗೂ ಮಾಜಿ ದೇವದಾಸಿ ಮಹಿಳೆಯರ ಸಮೀಕ್ಷೆಯನ್ನು ಕೈಗೊಳ್ಳಲು ಗುರುತಿಸಲಾಗಿರುವ ಸಮೀಕ್ಷಾದಾರರಿಗೆ ಹಾಗೂ ದೇವದಾಸಿ ಪುನರ್ವಸತಿ ಯೋಜನಾ ಘಟಕದ ಅಧಿಕಾರಿ ಸಿಬ್ಬಂದಿಗಳು ಸದರಿ ಸಮೀಕ್ಷೆಯನ್ನು ಕೈಗೊಳ್ಳುತ್ತಾರೆ. ಸಮೀಕ್ಷೆದಾರರುಗಳಿಗೆ ವಿವಿಧ ಹಂತದ ತರಬೇತಿ ನೀಡಲಾಗಿರುತ್ತದೆ.
ಎರಡು ಸಮೀಕ್ಷೆಗಳಲ್ಲಿ ಸಂಬಂಧಪಟ್ಟವರು ಭಾಗವಹಿಸಲು ಹೆಚ್ಚಿನ ಪ್ರಚಾರಕ್ಕಾಗಿ ಮಾಹಿತಿ, ಶಿಕ್ಷಣ ಹಾಗೂ ಸಂವಹನಕ್ಕೆ ಸಂಬಂಧಿಸಿದಂತೆ ಪೊಸ್ಟರ್ ಹಾಗೂ ಹೋರ್ಡಿಂಗ್ ತಯಾರಿಸಿ ರಾಜ್ಯಾದ್ಯಂತ ವ್ಯಾಪಕ ಪ್ರಚಾರವನ್ನು ಮುದ್ರಣ ಮಾಧ್ಯಮ, ವಿದ್ಯುನ್ಮಾನ ಮಾಧ್ಯಮ, ಆಕಾಶವಾಣಿ ಹಾಗೂ ಸಾಮಾಜಿಕ ಮಾಧ್ಯಮಗಳ ಮುಖಾಂತರ ಕೈಗೊಳ್ಳಲಾಗುವುದು. ಎರಡು ಸಮೀಕ್ಷೆಗಳಿಗೆ ಸಂಪರ್ಕಿಸಲು ಅನುಕೂಲವಾಗುವಂತೆ ಸಹಾಯವಾಣಿ ಸಂಖ್ಯೆ 1800 599 2025 ಪ್ರಾರಂಭಿಸಲಾಗಿದೆ.
ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಸಮೀಕ್ಷಾ ಕಾರ್ಯನಿರ್ವಹಣೆಗಾಗಿ ಜಿಲ್ಲಾಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಸಮಿತಿಗಳನ್ನು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಲಿಂಗತ್ವ ಅಲ್ಪಸಂಖ್ಯಾತರನ್ನು ಒಳಗೊಂಡ ಹಾಗೂ ಸಮುದಾಯ ಆಧಾರಿತ ಸಂಸ್ಥೆಗಳನ್ನು ಒಳಗೊಂಡಂತೆ ಸಮಿತಿ ರಚಿಸಲಾಗಿರುತ್ತದೆ.
ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷಾ ಕಾರ್ಯನಿರ್ವಹಣೆಗಾಗಿ ವಿವಿಧ ಹಂತಗಳಲ್ಲಿ ಆಂತರಿಕ ಸಮಿತಿ, ಜಿಲ್ಲಾ ಮತ್ತು ರಾಜ್ಯ ಮಟ್ಟದ ಸಮಿತಿ (ಮೇಲ್ವಿಚಾರಣೆ ಹಾಗೂ ಮೌಲ್ಯ ಮಾಪನ ಸಮಿತಿ) ಗಳನ್ನು ಮಾಜಿ ದೇವದಾಸಿ ಮಹಿಳೆಯರ ಸಂಘಟನೆಗಳ ಪ್ರತಿನಿಧಿಗಳನ್ನು ಒಳಗೊಂಡಂತೆ ರಚಿಸಲಾಗಿರುತ್ತದೆ.
ಹಿಂದಿನ ಸಮೀಕ್ಷೆಯಲ್ಲಿ ಬಿಟ್ಟು ಹೋಗಿರುವುದಾಗಿ ಮನವಿ ಸಲ್ಲಿಸುತ್ತಿರುವ ಮಾಜಿ ದೇವದಾಸಿ ಮಹಿಳೆಯರ ಮನವಿಯನ್ನು ತಾಲೂಕು ಹಾಗೂ ಜಿಲ್ಲಾ ಮಟ್ಟದ ಸಮಿತಿ ಮೂಲಕ ನಿಯಮಾನುಸಾರ ಕ್ರಮ ಕೈಗೊಂಡು ಇತ್ಯರ್ಥಪಡಿಸಲಾಗುವುದು. ಎರಡೂ ಸಮೀಕ್ಷೆಗಳನ್ನು ಜಿಲ್ಲಾಮಟ್ಟದಲ್ಲಿ ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಸಮನ್ವಯ ಸಾಧಿಸಿ ಯಶಸ್ವಿಯಾಗಿ ಸಮೀಕ್ಷೆ ಕಾರ್ಯ ಕೈಗೊಳ್ಳಲಾಗುವುದು ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







