400 ಅಭ್ಯರ್ಥಿಗಳಿಗೆ ಪೂರ್ವ ನೇಮಕಾತಿ ಸಬ್ ಇನ್ಸ್‌ಪೆಕ್ಟರ್ ತರಬೇತಿ : ಝಮೀರ್ ಅಹ್ಮದ್

ಬೆಂಗಳೂರು, ಅ.5: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 400 ಅಭ್ಯರ್ಥಿಗಳಿಗೆ ಪೂರ್ವ ನೇಮಕಾತಿ ಸಬ್ ಇನ್ಸ್ ಪೆಕ್ಟರ್ ತರಬೇತಿಯನ್ನು ನೀಡಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಝಮೀರ್ ಅಹ್ಮದ್ ಖಾನ್ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೇ ಮೊದಲ ಬಾರಿಗೆ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪೂರ್ವ ನೇಮಕಾತಿ ತರಬೇತಿ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಎಂದು ಹೇಳಿದರು.
ಒಟ್ಟು 2179 ಅರ್ಜಿಗಳನ್ನು ಸ್ವೀಕರಿಸಲಾಗಿತ್ತು. ಅದರಲ್ಲಿ 400 ಮಂದಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿತ್ತು. ಈ ಪೈಕಿ 243 ಹುಡುಗರು, 157 ಹೆಣ್ಣು ಮಕ್ಕಳಿದ್ದರು. ಹುಡುಗರಿಗೆ ಬೆಳಗಾವಿಯಲ್ಲಿ ಹಾಗೂ ಹೆಣ್ಣು ಮಕ್ಕಳಿಗೆ 90 ದಿನಗಳ ಕಾಲ ವಸತಿ ಸಹಿತ ತರಬೇತಿಯನ್ನು ನೀಡಲಾಗಿದೆ ಎಂದು ಅವರು ಹೇಳಿದರು.
ರಾಜ್ಯ ಸರಕಾರವು ಇನ್ನೆರಡು ತಿಂಗಳಲ್ಲಿ ಸುಮಾರು ಒಂದು ಸಾವಿರ ಸಬ್ ಇನ್ಸ್‍ಪೆಕ್ಟರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸುವ ಸಾಧ್ಯತೆಗಳಿವೆ. ದೇಶದ ಅತ್ಯುತ್ತಮ ತರಬೇತುದಾರ ಭಂಡಾರಿ ಹಾಗೂ ವೆಂಕಟೇಶ್ ಈ ಅಭ್ಯರ್ಥಿಗಳಿಗೆ ತರಬೇತಿಯನ್ನು ನೀಡಿದ್ದಾರೆ ಎಂದು ಝಮೀರ್ ಅಹ್ಮದ್ ಖಾನ್ ತಿಳಿಸಿದರು.
ನಾವು ಆಯೋಜಿಸಿದ್ದ ಶಿಬಿರದಲ್ಲಿ ತರಬೇತಿ ಪಡೆದ 400 ಅಭ್ಯರ್ಥಿಗಳ ಪೈಕಿ ಕನಿಷ್ಠ 160-200 ಮಂದಿ ಮುಂಬರುವ ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಪ್ರಕ್ರಿಯೆಯಲ್ಲಿ ಆಯ್ಕೆಯಾಗುತ್ತಾರೆ ಎಂಬ ವಿಶ್ವಾಸ ನನಗಿದೆ. ಸಮಾಜ ಕಲ್ಯಾಣ ಇಲಾಖೆಯಲ್ಲಿ 1300 ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗಿತ್ತು. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ 400 ಮಂದಿಗೆ ತರಬೇತಿ ನೀಡಿದ್ದೇವೆ ಎಂದು ಅವರು ಹೇಳಿದರು.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದೆ. ಶಿಕ್ಷಣ ಇಲ್ಲಿದ್ದರೆ ಮನುಷ್ಯ ಏನು ಮಾಡಲು ಸಾಧ್ಯವಿಲ್ಲ. ನಮ್ಮ ಇಲಾಖೆಯ ಬಜೆಟ್‍ನ ಅನುದಾನ 4500 ಕೊಟಿ ರೂ.ಗಳು. ಇದರಲ್ಲಿ 2900 ಕೋಟಿ ರೂ.ಗಳನ್ನು ಶೈಕ್ಷಣಿಕ ಚಟುವಟಿಕೆಗಳಿಗೆ ಮೀಸಲಿಡಲಾಗಿದೆ ಎಂದು ಝಮೀರ್ ಅಹ್ಮದ್ ಖಾನ್ ತಿಳಿಸಿದರು.
ಬೆಂಗಳೂರಿನ ಹಜ್ ಭವನದಲ್ಲಿ ಕಳೆದ ವರ್ಷ ಐಎಎಸ್, ಐಪಿಎಸ್, ಕೆಎಎಸ್ ಪರೀಕ್ಷೆಯ ಪೂರ್ವಭಾವಿ ತರಬೇತಿಯನ್ನು ಹಮ್ಮಿಕೊಳ್ಳಲಾಗಿತ್ತು. ಅದರಲ್ಲಿ ಪಾಲ್ಗೊಂಡಿದ್ದ 105 ಜನ ಅಭ್ಯರ್ಥಿಗಳು ಸರಕಾರದ ವಿವಿಧ ಇಲಾಖೆಯಲ್ಲಿ ಆಯ್ಕೆಯಾಗಿದ್ದಾರೆ. ಹಜ್ ಭವನವು ಕೇವಲ ಹಜ್ ಸಂದರ್ಭದಲ್ಲಿ ಒಂದು ತಿಂಗಳು ಮಾತ್ರ ಬಳಕೆಯಾಗುತ್ತದೆ. ಉಳಿದ 11 ತಿಂಗಳು ಹಜ್ ಭವನವನ್ನು ಸದುಪಯೋಗಪಡಿಸಿಕೊಳ್ಳಲು ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ಅವರು ಹೇಳಿದರು.







