ಮಹಿಳೆಯೊಂದಿಗೆ ಅಸಭ್ಯ ವರ್ತನೆ ಆರೋಪ | ಡಿಜಿಪಿ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ : ಜಿ.ಪರಮೇಶ್ವರ್

ಜಿ.ಪರಮೇಶ್ವರ್
ಬೆಂಗಳೂರು: ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆಯೆನ್ನಲಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ (ಡಿಸಿಆರ್ಇ) ಡಿಜಿಪಿ ಕೆ. ರಾಮಚಂದ್ರ ರಾವ್ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಮುಖ್ಯಮಂತ್ರಿ ಸಹ ಈ ವಿಷಯದ ಬಗ್ಗೆ ಚರ್ಚೆ ನಡೆಸಿದ್ದು, ಇಂತಹ ಘಟನೆಗಳು ಯಾವುದೇ ಕಾರಣಕ್ಕೂ ಪೊಲೀಸ್ ಇಲಾಖೆ ಸೇರಿದಂತೆ ಯಾವುದೇ ಇಲಾಖೆಯಲ್ಲಿ ನಡೆಯಬಾರದು ಎಂಬ ಸ್ಪಷ್ಟ ಸೂಚನೆ ನೀಡಿರುವುದಾಗಿ ಹೇಳಿದರು. ತನಿಖೆ ಪೂರ್ಣಗೊಂಡ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ. ಅಗತ್ಯವಿದ್ದರೆ ವಜಾ ಕ್ರಮವೂ ಜಾರಿಯಾಗಬಹುದು ಎಂದು ತಿಳಿಸಿದರು.
ವಿಡಿಯೋದಲ್ಲಿರುವ ಆರೋಪಗಳ ಬಗ್ಗೆ ಡಿಜಿಪಿ ಸುಳ್ಳು ಎಂದು ಹೇಳಿಕೆ ನೀಡಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಮೇಲ್ನೋಟಕ್ಕೆ ಗಂಭೀರ ಅಂಶಗಳು ಕಂಡುಬಂದಿರುವುದರಿಂದಲೇ ಕ್ರಮ ಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಸಮಗ್ರ ವಿಚಾರಣೆ ನಡೆಸಿ ಎಲ್ಲಾ ಆಯಾಮಗಳನ್ನು ಪರಿಶೀಲಿಸಲಾಗುವುದು ಎಂದು ಹೇಳಿದರು.
ಡಿಜಿಪಿ ತಮ್ಮನ್ನು ಭೇಟಿ ಮಾಡಲು ಯತ್ನಿಸಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಆ ಸಮಯದಲ್ಲಿ ನಾನು ವಿಶ್ರಾಂತಿಯಲ್ಲಿ ಇದ್ದೆ. ಇಂತಹ ಸನ್ನಿವೇಶಗಳಲ್ಲಿ ಬಹಳ ಎಚ್ಚರಿಕೆಯಿಂದ ನಡೆದುಕೊಳ್ಳಬೇಕಾಗುತ್ತದೆ ಎಂದು ಹೇಳಿದರು.
ಈ ರೀತಿಯ ಘಟನೆಗಳು ಪೊಲೀಸ್ ಇಲಾಖೆ ಮಾತ್ರವಲ್ಲ, ಯಾವುದೇ ಇಲಾಖೆಯ ಗೌರವಕ್ಕೆ ಧಕ್ಕೆ ತರುತ್ತವೆ. ಅದಕ್ಕಾಗಿಯೇ ತಕ್ಷಣ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.
ಸದ್ಯ ಸಂತ್ರಸ್ತೆ ಯಾರು ಎಂಬ ಮಾಹಿತಿ ಲಭ್ಯವಾಗಿಲ್ಲ ಎಂದು ಗೃಹ ಸಚಿವರು ತಿಳಿಸಿದರು.







