ರಾಜ್ಯದ ನಾಲ್ಕು ಕೃಷಿ ವಿವಿಗಳಲ್ಲಿ ಖಾಲಿಯಿರುವ ಹುದ್ದೆ ಭರ್ತಿಗೆ ಕ್ರಮ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ರಾಜ್ಯದ ನಾಲ್ಕು ಕೃಷಿ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದ್ದಾರೆ.
ವಿಕಾಸ ಸೌಧದ ಸಮಿತಿ ಕೊಠಡಿಯಲ್ಲಿ ಬೆಳಿಗ್ಗೆ 9 ರಿಂದಲೇ ವಿಶ್ವವಿದ್ಯಾಲಯಗಳ ಪ್ರಗತಿ ಪರಿಶೀಲನೆ ನಡೆಸಿದ ಕೃಷಿ ಸಚಿವರು ಎಲ್ಲಾ ಕೃಷಿ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸೂಚಸಿದರು.
ಶೇ100 ರಷ್ಟು ವಿಶ್ವವಿದ್ಯಾನಿಲಯ ಅನುದಾನ ಇರುವ ಹುದ್ದೆಗಳಿಗೆ ಆರ್ಥಿಕ ಇಲಾಖೆಗೆ ಕೇವಲ ಮಾಹಿತಿ ನೀಡಿ ನೇಮಕಾತಿ ಮಾಡಿಕೊಳ್ಳುಲು ಅನುಕೂಲವಾಗುವಂತೆ ಸೂಕ್ತ ಮಾರ್ಗಸೂಚಿ ಹೊರಡಿಸಬೇಕಿದೆ. ಅಲ್ಲದೆ, ಕೃಷಿ ವಿಶ್ವವಿದ್ಯಾನಿಲಯಗಳು ಹಾಗೂ ಸಚಿವಾಲಯದ ನಡುವೆ ಸೂಕ್ತ ಸಮನ್ವಯದ ಅಗತ್ಯವಿದೆ ಎಂದು ಕೃಷಿ ವಿಶ್ವವಿದ್ಯಾನಿಲಯಗಳ ಕುಲಪತಿಗಳಿಗೆ ಅವರು ತಿಳಿಸಿದರು.
ಕೃಷಿ ವಿಶ್ವ ವಿದ್ಯಾನಿಲಯಗಳು ಕೇವಲ ಸಂಶೋಧನೆಗೆ ಸೀಮಿತವಾಗದೆ ಕೃಷಿ ಹಾಗೂ ಕೃಷಿಕರ ಶ್ರೇಯೋಭಿದ್ದಿಗೆ ಬಳಕೆಯಾಗಬೇಕು. ಕೃಷಿ ವಿವಿಗಳಿಗೆ ಮುಖ್ಯಮಂತ್ರಿ ಹಾಗೂ ಸರಕಾರವು ಹೆಚ್ಚಿನ ನೆರವು ಹಾಗೂ ಪ್ರೋತ್ಸಾಹ ನೀಡುತ್ತಿದೆ. ಅದರ ಫಲ ರೈತರಿಗೆ ವರ್ಗಾವಣೆಯಾಗಬೇಕು ಎಂದು ಕೃಷಿ ಸಚಿವರು ಸೂಚನೆ ನೀಡಿದರು.
ಸಭೆಯಲ್ಲಿ ಕೃಷಿ ಇಲಾಖೆ ಕಾರ್ಯದರ್ಶಿ ಅನ್ಬುಕುಮಾರ್, ಬೆಂಗಳೂರು, ಶಿವಮೊಗ್ಗ, ಧಾರವಾಡ ಹಾಗೂ ರಾಯಚೂರು ಕೃಷಿ ವಿಶ್ವವಿದ್ಯಾನಿಲಯಗಳ ಕುಲಪತಿಗಳು ಹಾಗೂ ಕುಲಸಚಿವರು ಭಾಗವಹಿಸಿದ್ದರು.







