ರಾಜಾಜಿನಗರದಲ್ಲಿ ಬಹುಕೋಟಿ ರೂ. ಟೆಂಡರ್ ಹಗರಣ ಆರೋಪ : ಬಿಜೆಪಿ ಶಾಸಕ ಸುರೇಶ್ ಕುಮಾರ್ ವಿರುದ್ಧ ಲೋಕಾಯುಕ್ತಕ್ಕೆ ದೂರು

ಬಿಜೆಪಿ ಶಾಸಕ ಸುರೇಶ್ ಕುಮಾರ್
ಬೆಂಗಳೂರು, ಜು.2: ಬೆಂಗಳೂರಿನ ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಅನುದಾನ ಹಾಗೂ ಹಿಂದಿನ ಬಿಬಿಎಂಪಿಯಿಂದ ಕೈಗೊಳ್ಳಲಾದ ವಿವಿಧ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆಗಳಲ್ಲಿ ಭಾರಿ ಅಕ್ರಮ ಎಸಗಲಾಗಿದೆ ಎಂದು ಆರೋಪಿಸಿ ಬಿಜೆಪಿ ಶಾಸಕ ಎಸ್.ಸುರೇಶ್ ಕುಮಾರ್ ವಿರುದ್ಧ ಲೋಕಾಯುಕ್ತಕ್ಕೆ ದಾಖಲೆ ಸಮೇತ ದೂರು ಸಲ್ಲಿಸಲಾಗಿದೆ.
ಗುರುವಾರ ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿದ ವಕೀಲಸೂರ್ಯ ಮುಕುಂದರಾಜ್ ನೇತೃತ್ವದ ನಿಯೋಗ ದೂರು ಸಲ್ಲಿಕೆ ಮಾಡಿದ್ದು, ಶಾಸಕರು ಮತ್ತು ಸಂಬಂಧಪಟ್ಟ ಜಿಬಿಎ ಅಧಿಕಾರಿಗಳ ವಿರುದ್ಧ ತಕ್ಷಣವೇ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಶಾಸಕ ಎಸ್.ಸುರೇಶ್ ಕುಮಾರ್ ತಮ್ಮ ಅಧಿಕಾರ ದುರುಪಯೋಗಪಡಿಸಿಕೊಂಡು, ನಿಯಮಗಳನ್ನು ಗಾಳಿಗೆ ತೂರಿ, ತಮಗೆ ಬೇಕಾದ ಬೇನಾಮಿ ಗುತ್ತಿಗೆದಾರರಿಗೆ ಲಾಭ ಮಾಡಿಕೊಟ್ಟಿದ್ದಾರೆ. ಈ ಮೂಲಕ ಸರಕಾರಿ ಖಜಾನೆಗೆ ಭಾರಿ ಆರ್ಥಿಕ ನಷ್ಟ ಉಂಟು ಮಾಡಿದ್ದಾರೆ. ಜಿಎಸ್ಟಿ ಹಾಗೂ ಇಲಾಖೆಯ ಇತರೆ ವೆಚ್ಚಗಳೂ ಸೇರಿದರೆ ಈ ಒಟ್ಟು ಹಗರಣದ ಮೊತ್ತ 300 ಕೋಟಿ ರೂ.ಮೀರುತ್ತದೆ ಎಂದು ಅವರು ಆರೋಪಿಸಿದರು. ಲೋಕಾಯುಕ್ತರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸುರೇಶ್ ಕುಮಾರ್ ಹಾಗೂ ಅವರಿಗೆ ಸಹಕರಿಸಿದ ಜಿಬಿಎ ಅಧಿಕಾರಿಗಳ ವಿರುದ್ಧ ಸಮಗ್ರ ತನಿಖೆ ನಡೆಸಿ, ಕಠಿಣ ಶಿಕ್ಷೆ ಜರುಗಿಸಬೇಕು ಎಂದು ಅವರು ಒತ್ತಾಯಿಸಿದರು.




