ಪಶುಸಂಗೋಪನೆ | ಜಾನುವಾರುಗಳ ಆಕಸ್ಮಿಕ ಸಾವಿಗೆ ಪರಿಹಾರ ಹೆಚ್ಚಳ

ಸಾಂದರ್ಭಿಕ ಚಿತ್ರ
ಬೆಂಗಳೂರು : ಜಾನುವಾರುಗಳ ಆಕಸ್ಮಿಕ ಸಾವಿನ ಸಂದರ್ಭದಲ್ಲಿ ರೈತರು ಅನುಭವಿಸುತ್ತಿರುವ ಸಂಕಷ್ಟ ನಿವಾರಣೆಗೆ ‘ಅನುಗ್ರಹ ಯೋಜನೆ’ಯನ್ನು ಜಾರಿಗೊಳಿಸಲಾಗಿದ್ದು, ಪರಿಹಾರ ಹೆಚ್ಚಳ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಶುಕ್ರವಾರ ವಿಧಾನಸಭೆಯಲ್ಲಿ ಆಯವ್ಯಯ ಮಂಡಿಸಿದ ಅವರು, ಹಸು, ಎಮ್ಮೆ ಮತ್ತು ಎತ್ತುಗಳಿಗೆ ಪ್ರಸ್ತುತ ನೀಡಲಾಗುತ್ತಿರುವ ಪರಿಹಾರದ ಮೊತ್ತವನ್ನು 10,000 ರೂ. ಗಳಿಂದ 15,000 ರೂ., ಕುರಿ,ಮೇಕೆಗಳಿಗೆ ನೀಡಲಾಗುತ್ತಿರುವ ಮೊತ್ತವನ್ನು 5,000 ರೂ. ಗಳಿಂದ 7,500 ರೂ. ಗಳಿಗೆ ಹಾಗೂ 3-6 ತಿಂಗಳ ಕುರಿ, ಮೇಕೆ ಮರಿಗಳಿಗೆ ನೀಡಲಾಗುತ್ತಿರುವ ಮೊತ್ತವನ್ನು 3,500 ರೂ.ಗಳಿಂದ 5,000 ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಪ್ರಕಟಿಸಿದರು.
ಪಶುಸಂಗೋಪನೆಗೆ ಬಲ
* 50 ನೂತನ ಪಶು ಚಿಕಿತ್ಸಾಲಯ ಪ್ರಾರಂಭ
* 100 ಪಶು ವೈದ್ಯಕೀಯ ಸಂಸ್ಥೆಗಳ ನೂತನ ಕಟ್ಟಡಗಳನ್ನು ನಬಾರ್ಡ್ ಸಹಯೋಗದೊಂದಿಗೆ ನಿರ್ಮಾಣ
* ಅಮೃತ್ ಮಹಲ್ ಕಾವಲುಗಳಲ್ಲಿನ ಭೂ ಒತ್ತುವರಿ ತಡೆಯಲು ಹಾಗೂ ಅಮೃತ್ ಮಹಲ್ ರಾಸುಗಳಿಗೆ ಮೇವು ಲಭ್ಯವಾಗುವಂತೆ ಮಾಡಲು, ಅರಣ್ಯ ಇಲಾಖೆ ಹಾಗೂ ನರೇಗಾ ಸಹಯೋಗದೊಂದಿಗೆ ಮೇವಿನ ಮರಗಳ ನೆಡುತೋಪು ಅಭಿವೃದ್ಧಿ
* ರಾಜ್ಯದ ಹೆಮ್ಮೆಯ ದೇಶಿ ದನದ ತಳಿಗಳಾದ ಹಳ್ಳಿಕಾರ್, ಕಿಲಾರಿ, ಅಮೃತ್ ಮಹಲ್ ಹಾಗೂ ಬಂಡೂರು ಕುರಿ ತಳಿಯ ಸಂರಕ್ಷಣೆಗೆ 2 ಕೋಟಿ ರೂ. ಒದಗಿಸಲಾಗುವುದು.
* ವಲಸೆ ಕುರಿಗಾರರಿಗೆ ಕರ್ನಾಟಕ ಪಶುವೈದ್ಯಕೀಯ ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹಯೋಗದಲ್ಲಿ ತರಬೇತಿ







