ಬೆಂಗಳೂರು | ಸಿಎಂ, ಗೃಹ ಸಚಿವರಿಗೆ ಅವಾಚ್ಯ ಪದಗಳಿಂದ ನಿಂದನೆ : ಆರೋಪಿಯ ಬಂಧನ

ಸಾಂದರ್ಭಿಕ ಚಿತ್ರ
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಅವಾಚ್ಯ ಪದಗಳಿಂದ ನಿಂದಿಸಿ ವಿಡಿಯೊ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದ ಆರೋಪದಡಿ ವ್ಯಕ್ತಿಯನ್ನು ಇಲ್ಲಿನ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸುಂಕದಕಟ್ಟೆ ವಾರ್ಡ್ನ ಕಾಂಗ್ರೆಸ್ ಅಧ್ಯಕ್ಷ ನವೀನ್ ಕುಮಾರ್ ಎಂಬುವವರು ನೀಡಿದ್ದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡು ಆರೋಪಿ ಬಂಧಿಸಲಾಗಿದೆ ಎಂದು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಮಾಹಿತಿ ನೀಡಿದ್ದಾರೆ.
ಇತ್ತೀಚಿಗೆ ಆರೋಪಿ ಸಿದ್ದರಾಮಯ್ಯ ಹಾಗೂ ಡಾ.ಜಿ.ಪರಮೇಶ್ವರ್ ಅವರನ್ನು ಅವಾಚ್ಯವಾಗಿ ನಿಂದಿಸಿರುವ ವಿಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದ. ಸೋಮವಾರ ಆರೋಪಿಯ ವಿಡಿಯೊವನ್ನು ಗಮನಿಸಿದ್ದ ನವೀನ್ ಕುಮಾರ್, ಆರೋಪಿ ತನ್ನ ಹೇಳಿಕೆಗಳ ಮೂಲಕ ಸಮಾಜದಲ್ಲಿ ಕೋಮುಗಲಭೆಗೆ ಪ್ರಚೋದನೆ ನೀಡುತ್ತಿದ್ದಾನೆಂದು ಆರೋಪಿಸಿ ದೂರು ನೀಡಿದ್ದರು. ಅದರನ್ವಯ ಕಾಮಾಕ್ಷಿಪಾಳ್ಯ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.





