ನಿಯಮಬದ್ಧವಾಗಿ ಕಾಂಗ್ರೆಸ್ ಭವನಕ್ಕೆ ಜಾಗ : ಬೈರತಿ ಸುರೇಶ್

ಬೆಂಗಳೂರು : ರಾಜ್ಯದ ವಿವಿಧೆಡೆ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಸಂಬಂಧಿಸಿದಂತೆ ಯಾವುದೇ ಉಲ್ಲಂಘನೆಯಾಗಿಲ್ಲ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಸ್ಪಷ್ಟಪಡಿಸಿದ್ದಾರೆ.
ವಿಧಾನಪರಿಷತ್ತಿನಲ್ಲಿ ಮಂಗಳವಾರ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿಯ ಡಿ.ಎಸ್.ಅರುಣ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸಚಿವ ಸಂಪುಟದ ನಿರ್ಣಯದಂತೆ ನಾಗರಿಕ ಸೌಲಭ್ಯ ನಿವೇಶನಗಳನ್ನು ಕಾಂಗ್ರೆಸ್ ಪಕ್ಷದ ಕಚೇರಿಗಳ ನಿರ್ಮಾಣಕ್ಕೆ ಮಂಜೂರು ಮಾಡಲಾಗಿರುತ್ತದೆ ಎಂದು ತಿಳಿಸಿದರು.
ಚಾಮರಾಜನಗರ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ವ್ಯಾಪ್ತಿಯಲ್ಲಿ ಯಾವುದೇ ನಾಗರಿಕ ಸೌಲಭ್ಯ ನಿವೇಶನವನ್ನು ಮಂಜೂರು ಮಾಡಿಲ್ಲ ಎಂದು ತಿಳಿಸಿದ ಅವರು, ಮಂಜೂರಾತಿ ಪ್ರಕ್ರಿಯೆಯಲ್ಲಿ ಕಾನೂನು ಉಲ್ಲಂಘನೆ ಆಗಿರುವ ಬಗ್ಗೆ ಯಾವುದೇ ದೂರುಗಳು ಬಂದಿಲ್ಲ. ಹೀಗಾಗಿ ಪ್ರತಿಯೊಂದು ಪ್ರಕ್ರಿಯೆಯನ್ನು ಕಾನೂನು ಪ್ರಕಾರವೇ ಮಾಡಿರುವುದು ದೃಢವಾಗಿದೆ ಎಂದು ಅವರು ಹೇಳಿದರು.
Next Story





