ಬೆಂಗಳೂರು | ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಯುವಕ ಮೃತ್ಯು

ಬೆಂಗಳೂರು : ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಯುವಕನೋರ್ವ ಸಾವನ್ನಪ್ಪಿರುವ ಘಟನೆ ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಪ್ರಕಾಶ್ (19) ಸಾವನ್ನಪ್ಪಿದ ಯುವಕ ಎಂದು ಗುರುತಿಸಲಾಗಿದ್ದು, ಬುಧವಾರ ತಡರಾತ್ರಿ ದೊಡ್ಡನೆಕ್ಕುಂದಿ ಮುಖ್ಯರಸ್ತೆ ಬಳಿ ನಿರ್ಮಾಣ ಹಂತದ ಕಟ್ಟಡದಲ್ಲಿ ಈ ಘಟನೆ ನಡೆದಿದ್ದು, ಈ ಸಂಬಂಧ ಅಸಹಜ ಸಾವು ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಯಚೂರು ಮೂಲದ ಪ್ರಕಾಶ್ ಕುಟುಂಬ ಹಲವು ವರ್ಷಗಳಿಂದ ನಗರದಲ್ಲಿ ನೆಲೆಸಿತ್ತು. ತಂದೆ ಚಾಲಕನಾಗಿ ಕೆಲಸ ಮಾಡುತ್ತಿದ್ದರೆ, ತಾಯಿ ಕೂಲಿ ಕೆಲಸ ಮಾಡಿಕೊಂಡು ಜೀವನ ಕಟ್ಟಿಕೊಂಡಿದ್ದರು. ಮೃತ ಪ್ರಕಾಶ್ ಸ್ವಿಗ್ಗಿ ಕಂಪೆನಿಯಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಎನ್ನುವ ಮಾಹಿತಿ ಗೊತ್ತಾಗಿದೆ.
ಕೆಲಸದ ನಿಮಿತ್ತ ಹೊರ ಹೋಗುವುದಾಗಿ ಮನೆಯಲ್ಲಿ ಹೇಳಿ ದೊಡ್ಡನೆಕ್ಕುಂದಿ ಮುಖ್ಯರಸ್ತೆಯಲ್ಲಿ ಕಟ್ಟಡದ ಮೇಲೆ ಸ್ನೇಹಿತರೊಂದಿಗೆ ಮದ್ಯ ಸೇವನೆ ಮಾಡುತ್ತಿದ್ದ. ಈ ವೇಳೆ ಆಯತಪ್ಪಿ ಕೆಳಗೆ ಬಿದ್ದಿದ್ದು, ಸ್ಥಳೀಯರ ನೆರವಿನೊಂದಿಗೆ ಕೂಡಲೇ ವೈದೇಹಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.





