ರೂಪಾ ಹಾಸನ, ರಘುನಾಥ ಚ.ಹ.ಗೆ ‘ಪ್ರೊ.ಎಚ್.ಜಿ.ಸಣ್ಣಗುಡ್ಡಯ್ಯ ಪ್ರತಿಷ್ಠಾನ ಪ್ರಶಸ್ತಿ’

ರೂಪಾ ಹಾಸನ, ರಘುನಾಥ ಚ.ಹ.
ಬೆಂಗಳೂರು : ಲಲಿತ ಪ್ರಬಂಧ ಹಾಗೂ ಗದ್ಯ ಸಾಹಿತ್ಯದಲ್ಲಿ ತೊಡಗಿಸಿಕೊಂಡ ರಘುನಾಥ ಚ.ಹ., ಕಾವ್ಯ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡ ರೂಪಾ ಹಾಸನ ಅವರು ಪ್ರೊ.ಎಚ್.ಜಿ. ಸಣ್ಣಗುಡ್ಡಯ್ಯ ಪ್ರತಿಷ್ಠಾನದ ಪ್ರೊ.ಎಚ್.ಜಿ.ಸಣ್ಣಗುಡ್ಡಯ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ ಎಂದು ಪ್ರತಿಷ್ಠಾನದ ಗೌರವಾಧ್ಯಕ್ಷ ನಾಡೋಜ ಪ್ರೊ.ಬರಗೂರು ರಾಮಚಂದ್ರಪ್ಪ ತಿಳಿಸಿದ್ದಾರೆ.
ಶನಿವಾರ ಈ ಕುರಿತು ಪ್ರಕಟನೆ ನೀಡಿರುವ ಅವರು, ಪ್ರೊ.ಎಚ್.ಜಿ.ಸಣ್ಣಗುಡ್ಡಯ್ಯ ಅವರು ತುಮಕೂರು ಜಿಲ್ಲೆಯವರಾಗಿದ್ದು, ಲಲಿತ ಪ್ರಬಂಧ ವಿಮರ್ಶೆ, ಕಾವ್ಯಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ್ದರು. ಅವರ ನೆನಪಿಗಾಗಿ ಲಲಿತ ಪ್ರಬಂಧ- ಗದ್ಯ, ಕಾವ್ಯ ಕ್ಷೇತ್ರದ ತಲಾ ಒಬ್ಬರಿಗೆ ಪ್ರೊ.ಎಚ್.ಜಿ.ಸಣ್ಣಗುಡ್ಡಯ್ಯ ಪ್ರತಿಷ್ಠಾನ ಎರಡು ವರ್ಷಗಳಿಂದ ಪ್ರಶಸ್ತಿ ನೀಡುತ್ತಾ ಬಂದಿದೆ ಎಂದು ತಿಳಿಸಿದ್ದಾರೆ.
ಪ್ರಶಸ್ತಿಯು 10 ಸಾವಿರ ರೂ, ನಗದು ಹಾಗೂ ಫಲಕ, ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಫೆ.21ರಂದು ತುಮಕೂರಿನಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ವಿಮರ್ಶಕ ಎಚ್.ಎಸ್.ರಾಘವೇಂದ್ರರಾವ್, ತುಮಕೂರು ವಿವಿ ಕುಲಪತಿ ಪ್ರೊ.ವೆಂಕಟೇಶ್ವರಲು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.





