ಬೆಂಗಳೂರು | ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣ; ಆರೋಪಿಯ ಬಂಧನ, 14 ವಾಹನಗಳು ವಶಕ್ಕೆ

ಸಾಂದರ್ಭಿಕ ಚಿತ್ರ
ಬೆಂಗಳೂರು : ಪಾರ್ಕಿಂಗ್ ಸ್ಥಳಗಳಲ್ಲಿ ನಿಲ್ಲಿಸಿದ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಪ್ರಕರಣದಡಿ ಹೊರ ರಾಜ್ಯದ ಆರೋಪಿಯೊಬ್ಬನನ್ನು ಬಂಧಿಸಿ, 15 ಲಕ್ಷ ರೂ. ಮೌಲ್ಯದ 14 ದ್ವಿಚಕ್ರ ವಾಹನಗಳನ್ನು ಇಲ್ಲಿನ ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಗರದ ಗೋವಿಂದಶೆಟ್ಟಿ ಪಾಳ್ಯದ ನಿವಾಸಿಯೊಬ್ಬರು ಅಕ್ಟೋಬರ್ 22ರಂದು ಮಧ್ಯಾಹ್ನ ಎಲೆಕ್ಟ್ರಾನಿಕ್ ಸಿಟಿಗೆ ಹೋಗಿದ್ದು, 2ನೇ ಹಂತದಲ್ಲಿರುವ ಹೋಟೆಲ್ ಮುಂಭಾಗ ದ್ವಿಚಕ್ರ ವಾಹನ ನಿಲ್ಲಿಸಿ ಸಂಬಂಧಿಕರ ಮನೆಗೆ ಹೋಗಿದ್ದಾರೆ. ಮಧ್ಯರಾತ್ರಿ ವಾಪಸ್ ಹೋಗಲು ಈ ಸ್ಥಳಕ್ಕೆ ಬಂದು ನೋಡಿದಾಗ ದ್ವಿಚಕ್ರ ವಾಹನ ಇರಲಿಲ್ಲ. ಈ ಬಗ್ಗೆ ಅವರು ಪರಪ್ಪನ ಅಗ್ರಹಾರ ಠಾಣೆ ಪೊಲೀಸರಿಗೆ ದೂರು ನೀಡಿದ್ದರು.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು, ವಿವಿಧ ಆಯಾಮಗಳಲ್ಲಿ ಮಾಹಿತಿಗಳನ್ನು ಕಲೆಹಾಕಿ ಹುಸ್ಕೂರು ಹಣ್ಣಿನ ಮಾರ್ಕೆಟ್ ಬಳಿ ಅನುಮಾನಾಸ್ಪದವಾಗಿ ನಿಂತಿದ್ದ ವ್ಯಕ್ತಿಯನ್ನು ದ್ವಿಚಕ್ರ ವಾಹನ ಸಮೇತ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ದ್ವಿಚಕ್ರ ವಾಹನ ಕಳವು ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.
ಆರೋಪಿಯನ್ನು ಠಾಣೆಗೆ ಕರೆದು ಸುದೀರ್ಘ ವಿಚಾರಣೆ ನಡೆಸಿದಾಗ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯಲ್ಲಿ ದ್ವಿಚಕ್ರ ವಾಹನ ಕಳವು ಮಾಡಿದ್ದು, ಹುಸ್ಕೂರು ಹಣ್ಣಿನ ಮಾರ್ಕೆಟ್ ಹಿಂಭಾಗದ ಖಾಲಿ ಜಾಗದಲ್ಲಿ ನಿಲ್ಲಿಸಿರುವುದಾಗಿ ಹೇಳಿದ್ದಾನೆ.
ಕಾರ್ಯಾಚರಣೆ ಮುಂದುವರೆಸಿದ ಪೊಲೀಸರು, ಖಾಲಿ ಜಾಗದಲ್ಲಿದ್ದ 7 ದ್ವಿಚಕ್ರ ವಾಹನಗಳು ಹಾಗೂ ರಾಯಸಂದ್ರದ ಗುಂಡು ತೋಪಿನಲ್ಲಿ ನಿಲ್ಲಿಸಿದ್ದ 6 ದ್ವಿಚಕ್ರ ವಾಹನಗಳು ಸೇರಿ ಒಟ್ಟು 13 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದು, ಅವುಗಳ ಒಟ್ಟು ಮೌಲ್ಯ 15 ಲಕ್ಷ ಎಂದು ಅಂದಾಜಿಸಲಾಗಿದೆ. ಆರೋಪಿಯ ಬಂಧನದಿಂದ ಪರಪ್ಪನ ಅಗ್ರಹಾರ ಠಾಣೆಯ 1, ಹೆಬ್ಬಗೋಡಿ 5, ಅತ್ತಿಬೆಲೆ 2 ಪ್ರಕರಣಗಳು ಸೇರಿದಂತೆ ಒಟ್ಟು 8 ಪ್ರಕರಣಗಳು ಬೆಳಕಿಗೆ ಬಂದಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.







