Bengaluru | ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ ಪ್ರಕರಣ: ಮೂವರು ಅಪ್ರಾಪ್ತರು ವಶಕ್ಕೆ

ಸಾಂದರ್ಭಿಕ ಚಿತ್ರ | PC : freepik
ಬೆಂಗಳೂರು : ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ ಪ್ರಕರಣ ಸಂಬಂಧ ಮೂವರು ಅಪ್ರಾಪ್ತರನ್ನು ಜೆ.ಜೆ.ನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.
ಜ.4ರಂದು ರಾತ್ರಿ 8 ಗಂಟೆ ಸುಮಾರಿನಲ್ಲಿ ಜೆ.ಜೆ.ನಗರ ಠಾಣೆ ವ್ಯಾಪ್ತಿಯ ವಿ.ಎಸ್. ಗಾರ್ಡನ್ ಬಳಿಯ ಓಂ ಶಕ್ತಿ ದೇವಾಲಯದ ಬಳಿ ದೇವಿಯ ಮೆರವಣಿಗೆ ವೇಳೆ ಓಂ ಶಕ್ತಿ ಮಾಲಾಧಾರಿಗಳ ಮೇಲೆ ದುಷ್ಕರ್ಮಿಗಳಿಂದ ಕಲ್ಲು ತೂರಾಟ ನಡೆದಿದೆ.
ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ. ಈ ಬಗ್ಗೆ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಜೆ.ಜೆ.ನಗರ ಠಾಣೆ ಪೊಲೀಸರು ಹಾಗೂ ಎಸಿಪಿ ಭರತ್ ರೆಡ್ಡಿ ಸೇರಿದಂತೆ ಹಿರಿಯ ಅಧಿಕಾರಿಗಳು ಆಗಮಿಸಿ ಪರಿಶೀಲಿಸಿದ್ದಾರೆ. ಈ ಘಟನೆಯಿಂದ ಓಂ ಶಕ್ತಿ ಮಾಲಾಧಾರಿಗಳು ಹಾಗೂ ಸ್ಥಳೀಯರು ಸ್ಥಳದಲ್ಲಿ ಪ್ರತಿಭಟನೆ ನಡೆಸಿ, ಕಲ್ಲು ತೂರಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಈ ಹಿನ್ನೆಲೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಘಟನಾ ಸ್ಥಳದ ಸುತ್ತಮುತ್ತಲಿನ ರಸ್ತೆಗಳಲ್ಲಿರುವ ಸಿಸಿ ಕ್ಯಾಮೆರಾಗಳನ್ನು ಪರಿಶೀಲಿಸಿ ಅದರಲ್ಲಿರುವ ದೃಶ್ಯಾವಳಿ ಆಧರಿಸಿ ಸದ್ಯ ಮೂವರು ಅಪ್ರಾಪ್ತರನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆಗೊಳಪಡಿಸಿ ಮಾಹಿತಿಗಳನ್ನು ಸಂಗ್ರಹಿಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಸಂಪೂರ್ಣ ತನಿಖೆ : ಡಾ.ಜಿ.ಪರಮೇಶ್ವರ್
ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದ್ದು, ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು. ಕಲ್ಲು ತೂರಾಟ ನಡೆಸಿರುವವರು 15ರಿಂದ 16 ವಯೋಮಾನದ ಅಪ್ರಾಪ್ತರೆಂಬುವುದು ಗೊತ್ತಾಗಿದೆ. ಪೊಲೀಸರ ವಶದಲ್ಲಿರುವ ಅಪ್ರಾಪ್ತರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಯಾರು ಅವರನ್ನು ಪ್ರಚೋದಿಸಿದ್ದಾರೆ, ಘಟನೆಗೆ ಕಾರಣವೇನು, ಘಟನೆ ಹೇಗೆ ನಡೆಯಿತು ಎಂಬುವುದರ ಬಗ್ಗೆ ಸಂಪೂರ್ಣ ತನಿಖೆ ನಡೆಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.







