Bengaluru | ಬಲವಂತವಾಗಿ ವೇಶ್ಯಾವಾಟಿಕೆಗೆ ಮಹಿಳೆಯರ ಬಳಕೆ ಆರೋಪ: ಇಬ್ಬರ ಬಂಧನ, ಮೂವರ ರಕ್ಷಣೆ

ಸಾಂದರ್ಭಿಕ ಚಿತ್ರ | AI
ಬೆಂಗಳೂರು, ಮೇ 14: ಬಾಡಿಗೆ ಮನೆಯೊಂದರಲ್ಲಿ ಮಹಿಳೆಯರನ್ನು ಬಲವಂತವಾಗಿ ವೇಶ್ಯಾವಾಟಿಕೆಗೆ ದೂಡಲಾಗುತ್ತಿರುವ ಆರೋಪದಡಿ ಸಿಸಿಬಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಇಬ್ಬರು ಮಹಿಳೆಯರನ್ನು ಬಂಧಿಸಿ, ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಮೂವರು ಮಹಿಳೆಯರನ್ನು ರಕ್ಷಿಸಿರುವುದಾಗಿ ಗುರುವಾರ ವರದಿಯಾಗಿದೆ.
ಗುರುವಾರ ಬೆಳಗ್ಗೆ ಸಿಸಿಬಿ ಮಹಿಳಾ ರಕ್ಷಣಾ ದಳದ ಅಧಿಕಾರಿಗಳು ಮತ್ತು ಸಿಬ್ಬಂದಿ, ಬೆಂಗಳೂರಿನ ಅಜಿತ್ನಗರ ಮತ್ತು ವಿದ್ಯಾಮಾನ್ಯ ನಗರ ಪ್ರದೇಶಗಳ ಬಾಡಿಗೆ ಮನೆಗಳಲ್ಲಿ ಮಹಿಳೆಯರನ್ನು ಇರಿಸಿ ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು ಎಂಬ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಈ ಕಾರ್ಯಾಚರಣೆ ನಡೆಸಿದ್ದಾರೆ.
ಹೆಚ್ಚಿನ ಹಣ ಗಳಿಸುವ ಉದ್ದೇಶದಿಂದ, ಆರೋಪಿಗಳು ದೂರವಾಣಿ ಮೂಲಕ ಗ್ರಾಹಕರನ್ನು ಸಂಪರ್ಕಿಸಿ, ಅವರನ್ನು ಮನೆಗಳಿಗೆ ಕರೆಸಿ ವೇಶ್ಯಾವಾಟಿಕೆ ನಡೆಸುತ್ತಿದ್ದರು ಎಂಬುದು ವಿಚಾರಣೆಯ ವೇಳೆ ಗೊತ್ತಾಗಿರುವುದಾಗಿ ಸಿಸಿಬಿ ಮೂಲಗಳು ಹೇಳಿವೆ.
ಸದ್ಯ, ಈ ಸಂಬಂಧ ಆರೋಪಿಗಳ ವಿರುದ್ಧ ಸೋಲದೇವನಹಳ್ಳಿ ಹಾಗೂ ಬ್ಯಾಡರಹಳ್ಳಿ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.




