Bengaluru | ಶಿಕ್ಷಕರಿಂದ ಹಲ್ಲೆ ಆರೋಪ; ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ

ಬೆಂಗಳೂರು : ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕರು ಮಾನಸಿಕ ಹಾಗೂ ದೈಹಿಕ ಕಿರುಕುಳವನ್ನು ನೀಡಿದ್ದರಿಂದ ಏಳನೇ ತರಗತಿ ವಿದ್ಯಾರ್ಥಿಯೊಬ್ಬ ಕಟ್ಟಡದ ಮೇಲಿಂದ ಕೆಳಗೆ ಬಿದ್ದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದು ವರದಿಯಾಗಿದೆ.
ಮರಿಯಪ್ಪನಪಾಳ್ಯದ 13 ವರ್ಷದ ವಿದ್ಯಾರ್ಥಿಗೆ ಶಿಕ್ಷಕರೊಬ್ಬರು ಬಾಸುಂಡೆ ಬರುವಂತೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಮನನೊಂದ ವಿದ್ಯಾರ್ಥಿಯು ಮರಿಯಪ್ಪನಪಾಳ್ಯದಲ್ಲಿರುವ ತನ್ನ ಮನೆಯ ಮೇಲಿಂದ ಕೆಳಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಬಿದ್ದ ರಭಸಕ್ಕೆ ವಿದ್ಯಾರ್ಥಿ ತೀವ್ರವಾಗಿ ಗಾಯಗೊಂಡು ಅಸ್ವಸ್ಥನಾಗಿದ್ದು, ತಕ್ಷಣವೇ ವಿದ್ಯಾರ್ಥಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಾಯಾಳು ವಿದ್ಯಾರ್ಥಿಯ ತಂದೆ ಮಹೇಶ್ ಕುಮಾರ್ ಚಿಲ್ಲರೆ ಅಂಗಡಿ ನಡೆಸುತ್ತಿದ್ದು, ತಾಯಿ ಕುಸುಮ ಅದೇ ಅಂಗಡಿಯಲ್ಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಮಗನಿಗೆ ಆಗಿರುವ ಸ್ಥಿತಿಯನ್ನು ಕಂಡು ಪೋಷಕರು ಹಾಗೂ ಸಂಬಂಧಿಕರು ಶಾಲಾ ಆಡಳಿತ ಮಂಡಳಿ ಮತ್ತು ಶಿಕ್ಷಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ವಿದ್ಯಾರ್ಥಿಯ ಪೋಷಕರು ಶಾಲಾ ಆಡಳಿತ ಮಂಡಳಿ ಮತ್ತು ಸಂಬಂಧಪಟ್ಟ ಶಿಕ್ಷಕರ ವಿರುದ್ಧ ಜ್ಞಾನಭಾರತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ.






