Bengaluru | ಸಾರ್ವಜನಿಕರ ಎದುರಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಬೆಂಗಳೂರು : ರಾಜಧಾನಿ ಬೆಂಗಳೂರಿನ ಮೆಜೆಸ್ಟಿಕ್ ಬಿಎಂಟಿಸಿ ಬಸ್ ನಿಲ್ದಾಣದ ಬಳಿ ಬಿಹಾರ ಮೂಲದ ಯುವಕನೊಬ್ಬ ಸಾರ್ವಜನಿಕರ ಎದುರಲ್ಲೇ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶನಿವಾರ ವರದಿಯಾಗಿದೆ.
ಉದ್ಯೋಗಕ್ಕಾಗಿ ಬೆಂಗಳೂರಿಗೆ ಬಂದಿದ್ದ ಯುವಕ ಶನಿವಾರ ಬೆಳಗ್ಗೆ 7:30ರ ಸುಮಾರಿಗೆ ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ಬಂದಿದ್ದಾನೆ. ಈ ವೇಳೆ ಪ್ರಾಣಕಳೆದುಕೊಳ್ಳುವ ಯತ್ನಿಸಿ ಹೈಡ್ರಾಮಾ ಸೃಷ್ಠಿಸಿದ್ದಾನೆ ಎಂದು ತಿಳಿದುಬಂದಿದೆ. ಯುವಕನ ಈ ಹೈಡ್ರಾಮಾವನ್ನು ಬಸ್ ನಿಲ್ದಾಣದಲ್ಲಿದ್ದ ಪ್ರಯಾಣಿಕರು ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದಾರೆ.
ಈ ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಉಪ್ಪಾರಪೇಟೆ ಪೊಲೀಸ್ ಠಾಣೆಯ ಸಿಬ್ಬಂದಿ ತಕ್ಷಣ ಆತನನ್ನು ವಶಕ್ಕೆ ಪಡೆದು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ರವಾನಿಸಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ ಯುವಕ ತೀವ್ರ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದನು ಎಂದು ಗೊತ್ತಾಗಿದೆ.
ಕೆಲಸ ಸಿಗದೇ ಅಥವಾ ವೈಯಕ್ತಿಕ ಕಾರಣಗಳಿಂದ ನೊಂದು ಈ ರೀತಿ ಮಾಡಿಕೊಂಡಿರಬಹುದು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.






