Bengaluru | ಅಮಿತ್ ಶಾ ರಾಜೀನಾಮೆಗೆ ಆಗ್ರಹಿಸಿ ಯುವ ಕಾಂಗ್ರೆಸ್‍ನಿಂದ ಬಿಜೆಪಿ ಕಚೇರಿಗೆ ಮುತ್ತಿಗೆ ಯತ್ನ

ಬೆಂಗಳೂರು : ನೀಟ್ ಪರೀಕ್ಷಾ ಅಕ್ರಮ ಹಾಗೂ ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆಯನ್ನು ಖಂಡಿಸಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಆಗ್ರಹಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು, ವಿದ್ಯಾರ್ಥಿಗಳು ನಗರದ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ರವಿವಾರ ನಡೆದಿದೆ.
ಕೇಂದ್ರ ಸರಕಾರದ ವೈಫಲ್ಯದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿರುವ ಧೋರಣೆ ಖಂಡಿಸಿ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿ ಬಳಿ ಘೋಷಣೆ ಕೂಗಿದರು. ಈ ವೇಳೆ ಪೊಲೀಸರು ನೆರೆದಿದ್ದ ನೂರಾರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು, ವಿದ್ಯಾರ್ಥಿಗಳನ್ನು ಬಂಧಿಸಿ ಬಳಿಕ ಬಿಡುಗಡೆಗೊಳಿಸಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ಯುವ ಕಾಂಗ್ರೆಸ್ ಪ್ರತಿಭಟನೆಯನ್ನು ಪೊಲೀಸರು ಲಾಠಿಚಾರ್ಜ್ ಮಾಡುವ ಮೂಲಕ ಹತ್ತಿಕ್ಕಲು ಪ್ರಯತ್ನಿಸಿದರು ಎಂದು ಪ್ರತಿಭಟನಾನಿರತರು ಆರೋಪಿಸಿದರು.
ಈ ಧೋರಣೆಯನ್ನು ಖಂಡಿಸಿದ ರಾಜ್ಯ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಎಚ್.ಎಸ್.ಮಂಜುನಾಥ್, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುವುದು ಪ್ರತಿಯೊಬ್ಬ ನಾಗರಿಕನ ಸಂವಿಧಾನಬದ್ಧ ಹಕ್ಕು. ವಿದ್ಯಾರ್ಥಿಗಳ ಭವಿಷ್ಯ ಮತ್ತು ನ್ಯಾಯಕ್ಕಾಗಿ ಬೀದಿಗಿಳಿದ ಯುವ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಪೊಲೀಸರು ನಡೆಸಿರುವ ಲಾಠಿ ಪ್ರಹಾರ ಅತ್ಯಂತ ಖಂಡನೀಯ. ಸತ್ಯವನ್ನು ಮರೆಮಾಚಲು ಮತ್ತು ಜನರ ಧ್ವನಿಯನ್ನು ಹತ್ತಿಕ್ಕಲು ಲಾಠಿಚಾರ್ಜ್ ಮಾಡಲಾಗಿದೆ ಎಂದು ಕಿಡಿಕಾರಿದರು.
ಈ ಪ್ರತಿಭಟನೆಯಲ್ಲಿ ಭಾರತೀಯ ಯುವ ಕಾಂಗ್ರೆಸ್ ರಾಷ್ಟ್ರೀಯ ಕಾರ್ಯದರ್ಶಿ ತಾರೀಖ್ ಬಾಗವಾನ್ ಸೇರಿದಂತೆ ಯುವ ಕಾಂಗ್ರೆಸ್ ಪದಾಧಿಕಾರಿಗಳು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.






