Bengaluru | ನಿಂತಿದ್ದ ಟ್ರ್ಯಾಕ್ಟರ್ಗೆ ಬೈಕ್ ಡಿಕ್ಕಿ: ಯೋಧ ಮೃತ್ಯು

ಬೆಂಗಳೂರು : ನಿಂತಿದ್ದ ಟ್ರ್ಯಾಕ್ಟರ್ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ರಜೆಯ ಮೇಲೆ ಊರಿಗೆ ಬಂದಿದ್ದ ಯೋಧನೊಬ್ಬ ಮೃತಪಟ್ಟ ಘಟನೆ ಕನಕಪುರ ಬೈಪಾಸ್ ರಸ್ತೆಯ ಗಡಸಳ್ಳಿ ಬಳಿ ನಡೆದಿದೆ. ಕನಕಪುರ ತಾಲೂಕಿನ ಶಿವನಹಳ್ಳಿ ನಿವಾಸಿ ಚನ್ನವೀರೇಗೌಡ (45) ಮೃತಪಟ್ಟ ಯೋಧ ಎಂದು ಗುರುತಿಸಲಾಗಿದೆ.
ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲಿಸ್ ಪಡೆಯ ಯೋಧರಾಗಿದ್ದ ಚನ್ನವೀರೇಗೌಡ, ಮೊನ್ನೆಯಷ್ಟೇ ರಜೆಯ ಮೇಲೆ ಸ್ವಗ್ರಾಮಕ್ಕೆ ಬಂದಿದ್ದರು. ಯೋಧ ತಮ್ಮ ಮಗನೊಂದಿಗೆ ಬೈಕ್‍ನಲ್ಲಿ ತೆರಳುತ್ತಿದ್ದಾಗ ಗಡಸಳ್ಳಿ ಬಳಿ ರಸ್ತೆ ಬದಿ ನಿಂತಿದ್ದ ಟ್ರ್ಯಾಕ್ಟರ್ಗೆ ಬೈಕ್ ಡಿಕ್ಕಿಯಾಗಿದೆ. ಚನ್ನವೀರೇಗೌಡಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಕನಕಪುರ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ ಆಸ್ಪತ್ರೆಯಲ್ಲಿ ಯೋಧನಿಗೆ ಸೂಕ್ತ ಚಿಕಿತ್ಸೆ ಸಿಗದೇ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.
ಸಿಬ್ಬಂದಿಯ ನಿರ್ಲಕ್ಷ್ಯವೇ ಸಾವಿಗೆ ಕಾರಣವೆಂದು ಆಸ್ಪತ್ರೆ ಸಿಬ್ಬಂದಿ ವಿರುದ್ಧ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಕನಕಪುರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.




