Bengaluru | ಖಾಲಿ ಇರುವ ಗ್ರಂಥಪಾಲಕರ ಹುದ್ದೆ ಭರ್ತಿ ಮಾಡುವಂತೆ ಆಗ್ರಹಿಸಿ ಧರಣಿ

ಬೆಂಗಳೂರು : ರಾಜ್ಯದ ವಿವಿಧ ಶೈಕ್ಷಣಿಕ ಸಂಸ್ಥೆಗಳು ಹಾಗೂ ಸಾರ್ವಜನಿಕ ಗ್ರಂಥಾಲಯಗಳಲ್ಲಿ ಖಾಲಿ ಇರುವ ಗ್ರಂಥಪಾಲಕರ ಹುದ್ದೆಗಳನ್ನು ತಕ್ಷಣವೇ ಭರ್ತಿ ಮಾಡಬೇಕು ಮತ್ತು ಸಮಾಜದಲ್ಲಿ ಗ್ರಂಥಾಲಯಗಳ ಮಹತ್ವದ ಕುರಿತು ಜಾಗೃತಿ ಮೂಡಿಸಬೇಕು ಎಂದು ಆಗ್ರಹಿಸಿ, ಕರ್ನಾಟಕ ರಾಜ್ಯ ಗ್ರಂಥಾಲಯ ಸಂಘದ ವತಿಯಿಂದ ನಗರದ ಫ್ರೀಡಂ ಪಾರ್ಕ್‍ನಲ್ಲಿ ಸೋಮವಾರ ಬೃಹತ್ ಧರಣಿ ನಡೆಸಲಾಯಿತು.
ಈ ವೇಳೆ ಮಾತನಾಡಿದ ಕರ್ನಾಟಕ ರಾಜ್ಯ ಗ್ರಂಥಾಲಯ ಸಂಘದ ಅಧ್ಯಕ್ಷ ಡಾ.ಎಸ್.ಎಲ್.ಕಾಡದೇವರಮಠ, ಶೈಕ್ಷಣಿಕ ಸಂಸ್ಥೆಗಳಲ್ಲಿ ಖಾಲಿ ಇರುವ ಗ್ರಂಥಪಾಲಕ ಮತ್ತು ಸಿಬ್ಬಂದಿ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಬೇಕು. ಖಾಸಗಿ ಸಂಸ್ಥೆಗಳಿಗೂ ಸಮಗ್ರ ನೇಮಕಾತಿ ನೀತಿ ರೂಪಿಸಬೇಕು ಎಂದು ಒತ್ತಾಯಿಸಿದರು.
ಕಾಲೇಜು, ಆರೋಗ್ಯ ವಿಜ್ಞಾನ, ಪಾಲಿಟೆಕ್ನಿಕ್ ಹಾಗೂ ಸಾರ್ವಜನಿಕ ಗ್ರಂಥಾಲಯಗಳಿಗೆ ಏಕರೂಪದ ವೃಂದ ಮತ್ತು ನೇಮಕಾತಿ ನಿಯಮಗಳನ್ನು ಜಾರಿಗೊಳಿಸುವುದರ ಜೊತೆಗೆ, ಗ್ರಾಮ ಪಂಚಾಯತಿ ಗ್ರಂಥಾಲಯ ಮೇಲ್ವಿಚಾರಕರ (ಅರಿವು ಕೇಂದ್ರ) ಸೇವೆಗಳನ್ನು ಸಕ್ಷಮಗೊಳಿಸಿ ಅವರ ಕೌಶಲ್ಯಾಭಿವೃದ್ಧಿಗೆ ಸೂಕ್ತ ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದರು.
ಸಾರ್ವಜನಿಕ ಗ್ರಂಥಾಲಯ ಕಾಯ್ದೆಗೆ ಅಗತ್ಯ ತಿದ್ದುಪಡಿ ತಂದು ಮೂಲಸೌಕರ್ಯ ಅಭಿವೃದ್ಧಿಪಡಿಸಬೇಕು. ಸರಕಾರ ಗ್ರಂಥಾಲಯ ಸಂಘಗಳ ನಡುವೆ ಸಮಾಲೋಚನೆಗಾಗಿ ನಿಯಮಿತ ಸಮಾಲೋಚನಾ ವೇದಿಕೆ ರಚಿಸಬೇಕು ಎಂದು ಒತ್ತಾಯಿಸಿದರು.
ಸಮಾಜದ ಬೌದ್ಧಿಕ ವಿಕಸನಕ್ಕೆ ಗ್ರಂಥಾಲಯಗಳು ಅತ್ಯಗತ್ಯವಾಗಿದ್ದು, ಸರಕಾರ ತಕ್ಷಣವೇ ಸ್ಪಂದಿಸಿ ನಮ್ಮ ಎಲ್ಲ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲದಿದ್ದರೆ, ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು.
ಧರಣಿಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದ ಗ್ರಂಥಪಾಲಕರು ಹಾಗೂ ಕರ್ನಾಟಕ ರಾಜ್ಯ ಗ್ರಂಥಾಲಯ ಸಂಘದ ಮುಖಂಡರು ಭಾಗವಹಿಸಿದ್ದರು.






