Bengaluru | ಸರಗಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು : ಸರಗಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ತಲಘಟ್ಟಪುರ ಠಾಣಾ ಪೊಲೀಸರು ಬಂಧಿಸಿದ್ದು, ಆರೋಪಿಗಳಿಂದ 15 ಗ್ರಾಂ, ಚಿನ್ನದ ಸರ, ಕೃತ್ಯಕ್ಕೆ ಬಳಸಿದ್ದ ಒಂದು ದ್ವಿ-ಚಕ್ರ ವಾಹನವನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳನ್ನು ತುರಹಳ್ಳಿಯ ಹೇಮಂತ್ ರೆಡ್ಡಿ ಹಾಗೂ ನಾಗೇಶ್ ಎಂದು ಗುರುತಿಸಲಾಗಿದೆ.
ಲಿಂಗದೀರನಹಳ್ಳಿಯ ನಿವಾಸಿಯೊಬ್ಬರು ರಸ್ತೆಯಲ್ಲಿ ನಡೆದುಕೊಂಡು ಮನೆಗೆ ಹೋಗುತ್ತಿದ್ದಾಗ, ಇಬ್ಬರು ಅಪರಿಚಿತ ವ್ಯಕ್ತಿಗಳು ದ್ವಿ-ಚಕ್ರ ವಾಹನದಲ್ಲಿ ಬಂದು ಕತ್ತಿನಲ್ಲಿದ್ದ ಚಿನ್ನದ ಸರವನ್ನು ಕಿತ್ತುಕೊಂಡು ಹೋಗಿರುತ್ತಾರೆಂದು ದೂರು ನೀಡಿದ್ದರು. ಈ ಕುರಿತು ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಸರಗಳ್ಳತನ ಪ್ರಕರಣ ದಾಖಲಾಗಿದೆ.
ವಿವಿಧ ಆಯಾಮಗಳಲ್ಲಿ ಪ್ರಕರಣದ ತನಿಖೆಯನ್ನು ಕೈಗೊಂಡು ತುರಹಳ್ಳಿಯ ಪಾರ್ಕ್ ವೊಂದರ ಬಳಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
Next Story




