Bengaluru | ಜಮೀನು ವಿವಾದಗಳಲ್ಲಿ ಅನಾವಶ್ಯಕವಾಗಿ ಪೊಲೀಸರು ಮಧ್ಯ ಪ್ರವೇಶಿಸಿದರೆ ಕ್ರಮ : ಮುಖ್ಯ ಪೊಲೀಸ್ ಆಯುಕ್ತ ಆರ್.ಹಿತೇಂದ್ರ

ಬೆಂಗಳೂರು : ನಗರದ ಹೊರ ಭಾಗದಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ಹೆಚ್ಚಾಗಿ ನಡೆಯುತ್ತಿದ್ದು, ಇದರಲ್ಲಿ ಕೆಲವು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಶಾಮೀಲಾಗುತ್ತಿದ್ದಾರೆ ಎಂಬ ದೂರುಗಳು ಬಂದಿವೆ. ಹೀಗಾಗಿ ಜಮೀನು ವಿವಾದಗಳಲ್ಲಿ ಅನಾವಶ್ಯಕವಾಗಿ ಪೊಲೀಸರು ಮಧ್ಯ ಪ್ರವೇಶಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ನಗರದ ಮುಖ್ಯ ಪೊಲೀಸ್ ಆಯುಕ್ತ ಆರ್.ಹಿತೇಂದ್ರ ಎಚ್ಚರಿಕೆ ನೀಡಿದ್ದಾರೆ.
ಶನಿವಾರ ಇಲ್ಲಿನ ಮುಖ್ಯ ಆಯುಕ್ತರ ಕಚೇರಿಯ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಇನ್ನು ಮುಂದೆ ಅನಾವಶ್ಯಕವಾಗಿ ಯಾರಾದರೂ ಇಂತಹ ಜಮೀನು ವ್ಯವಹಾರಗಳಲ್ಲಿ ಮೂಗು ತೂರಿಸಿದರೆ ಅಂಥವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ನಗರದಲ್ಲಿ ರೌಡಿ ಚಟುವಟಿಕೆಗಳು ನಡೆಯುತ್ತಿವೆ. ಅವುಗಳನ್ನು ಪ್ರತಿಯೊಬ್ಬ ಅಧಿಕಾರಿ ಮತ್ತು ಸಿಬ್ಬಂದಿಗಳು ಮಟ್ಟ ಹಾಕಬೇಕು. ಆಗಾಗ್ಗೆ ಅವರ ಚಲನವಲನಗಳ ಬಗ್ಗೆ ನಿಗಾ ವಹಿಸಬೇಕು. ಮಾದಕವಸ್ತುಗಳು ಹೆಚ್ಚು ಬರುತ್ತಿವೆ ಎಂದು ಬಹುತೇಕ ಜನ ಹೇಳುತ್ತಿದ್ದಾರೆ. ಹೀಗಾಗಿ ಡ್ರಗ್ಸ್ ಪೆಡ್ಲರ್‍ಗಳನ್ನು ಬಂಧಿಸಿ ಮಾದಕವಸ್ತುಗಳನ್ನು ವಶಪಡಿಸಿಕೊಳ್ಳುವುದಲ್ಲದೇ, ಅದರ ಮೂಲವನ್ನು ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ತಿಳಿಸಿದರು.
ಸಾರ್ವಜನಿಕ ಸ್ಥಳಗಳು ಹಾಗೂ ಬಸ್ಸು, ರೈಲು ನಿಲ್ದಾಣ, ಮಹಿಳಾ ಪಿಜಿಗಳ ಬಳಿ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಗಸ್ತಿನಲ್ಲಿ ನೇಮಿಸಿ. ಸಂಕಷ್ಟಕ್ಕೊಳಗಾದ ಮಹಿಳೆಯರು ನಮ್ಮ 112ಗೆ ಕರೆ ಮಾಡಿದ ತಕ್ಷಣ ಕೂಡಲೇ ಸ್ಪಂದಿಸಬೇಕು, ತಡಮಾಡಿದರೆ ಅಂಥವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಈ ಸಭೆಯಲ್ಲಿ ನಗರದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಲ್ಲ ಇನ್ ಸೆಕ್ಟರ್‍ಗಳು, ಎಸಿಪಿಗಳು, ಡಿಸಿಪಿಗಳು, ಆಯುಕ್ತರುಗಳು ಭಾಗವಹಿಸಿದ್ದರು.






