ಬೆಂಗಳೂರು: DRDO ವಿಜ್ಞಾನಿ ಆತ್ಮಹತ್ಯೆ

ಬೆಂಗಳೂರು: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ಯ ವಿಜ್ಞಾನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಶರದ್ ಕಟಿಯಾರ್ ಆತ್ಮಹತ್ಯೆ ಮಾಡಿಕೊಂಡಿರುವ ವಿಜ್ಞಾನಿ. ಇವರು ಅ.21ರಂದು ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಸೀಗೇಹಳ್ಳಿಯ ಅಪಾರ್ಟ್ಮೆಂಟ್ ನ ನಾಲ್ಕನೆ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ.
ಶರದ್ ಕಟಿಯಾರ್ ಡಿ ಆರ್ ಡಿ ಓ ಅಧೀನದ ವೈಮಾನಿಕ ಅಭಿವೃದ್ಧಿ ಸಂಸ್ಥೆ(ADA)ಯ ಪ್ರೋಗ್ರಾಮಿಂಗ್ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಕಳೆದೊಂದು ತಿಂಗಳಿನಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಶರದ್ ಅವರು ಚಿಕಿತ್ಸೆ ಪಡೆದಿದ್ದರು. ಅ.21ರಂದು ಆಸ್ಪತ್ರೆಗೆ ಹೋಗಿ ಬಂದ ಶರದ್ ಕಟಿಯಾರ್ ಸಂಜೆ ನಾಲ್ಕನೇ ಮಹಡಿಗೆ ಹೋಗಿ ಅಲ್ಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವೇಳೆ ಅವರ ತಂದೆ ಶರದ್ ರನ್ನ ಹಿಂಬಾಲಿಸಿದರಾದರೂ ಅವರನ್ನ ತಲುಪುವ ಮುನ್ನವೇ ಶರದ್ ಕೆಳಗೆ ಹಾರಿದ್ದಾರೆ ಎಂದು ಹೇಳಲಾಗಿದೆ. ಕೂಡಲೇ ಅವರನ್ನ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲಿ ಶರದ್ ಕಟಿಯಾರ್ ಕೊನೆಯುಸಿರೆಳೆದಿದ್ದರು.
ಈ ಬಗ್ಗೆ ಕೆ.ಆರ್.ಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.




