Bengaluru | ಇ-ಕೆವೈಸಿಗೆ ಹಣದ ಬೇಡಿಕೆ : ನ್ಯಾಯಬೆಲೆ ಅಂಗಡಿ ಪರವಾನಿಗೆ ಅಮಾನತು

ಸಾಂದರ್ಭಿಕ ಚಿತ್ರ | Photo credit : AI
ಬೆಂಗಳೂರು : ಪಡಿತರ ಚೀಟಿಗೆ ಇ-ಕೆವೈಸಿ ಮಾಡಿಸಲು ಪಡಿತರ ಫಲಾನುಭವಿಗಳಿಂದ ಹಣಕ್ಕೆ ಬೇಡಿಕೆ ಇಟ್ಟ ಬೆಂಗಳೂರಿನ ಪಡಿತರ ಅಂಗಡಿ(ನ್ಯಾಯಬೆಲೆ)ಯೊಂದರ ಪರವಾನಿಗೆಯನ್ನು ಶುಕ್ರವಾರ ಅಮಾನತುಗೊಳಿಸಲಾಗಿದೆ.
ಬೆಂಗಳೂರಿನ ವಿಜಯನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚೋಳೂರುಪಾಳ್ಯ ಮಹಿಳಾ ಕ್ಷೇಮಾಭಿವೃದ್ಧಿ ಸಂಘ ನ್ಯಾಯಬೆಲೆ ಅಂಗಡಿಯ ಸಿಬ್ಬಂದಿ ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡಿಸಲು ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು. ಈ ಕುರಿತ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿತ್ತು ಎಂದು ಆಹಾರ ಇಲಾಖೆ ತಿಳಿಸಿದೆ.
ಈ ಸಂಬಂಧ ಆಹಾರ ಮತ್ತು ನಾಗರೀಕ ಇಲಾಖೆ ಅಧಿಕಾರಿಗಳು ಪರಿಶೀಲಿಸಿದಾಗ ನ್ಯಾಯಬೆಲೆ ಅಂಗಡಿ ಸಿಬ್ಬಂದಿ ಹಣಕ್ಕೆ ಬೇಡಿಕೆ ಇಟ್ಟ ಆರೋಪ ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಇಲಾಖೆಯ ಬೆಂಗಳೂರಿನ ಪಶ್ಚಿಮ ವಲಯದ ಜಂಟಿ ನಿರ್ದೇಶಕರು ಸದರಿ ನ್ಯಾಯಬೆಲೆ ಅಂಗಡಿ ಪರವಾನಿಗೆಯನ್ನು ತಕ್ಣಣದಿಂದಲೇ ಜಾರಿಗೆ ಬರುವಂತೆ ಅಮಾನತ್ತಿನಲ್ಲಿರಿಸಿ ಆದೇಶ ಹೊರಡಿಸಿದ್ದಾರೆ.
ಮುಂದುವರೆದು, ಇಂತಹ ಪ್ರಕರಣಗಳನ್ನು ತಡೆಯುವಲ್ಲಿ ವಿಫಲವಾದ ಸಂಬಂಧಿಸಿದ ಆಹಾರ ನಿರೀಕ್ಷಕರಿಗೆ ಕಾರಣ ಕೇಳಿ ನೋಟೀಸ್ ಜಾರಿ ಮಾಡಿ, ಮೂರು ದಿನದಲ್ಲಿ ಉತ್ತರಿಸುವಂತೆ ತಿಳಿಸಲಾಗಿದೆ. ‘ಇ-ಕೆವೈಸಿ ಪ್ರಕ್ರಿಯೆಯಲ್ಲಿ ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಯಾವುದೇ ಲೋಪವಾಗದಂತೆ ಹಾಗೂ ಪಡಿತರ ಚೀಟಿದಾರರಿಂದ ಹಣ ಪಡೆಯದಂತೆ ನಿಗಾ ವಹಿಸುವಂತೆ ಹಲವಾರು ಬಾರಿ ನಿರ್ದೇಶನ ನೀಡಿದರೂ, ಸದರಿ ಅಧಿಕಾರಿ ನಿರ್ಲಕ್ಷ್ಯ ಪ್ರದರ್ಶಿಸಿ ಕರ್ತವ್ಯಲೋಪವೆಸಗಿದ್ದಾರೆ’ ಎಂದು ಇಲಾಖೆಯ ನೋಟಿಸಿನಲ್ಲಿ ತಿಳಿಸಲಾಗಿದೆ.
ಆಹಾರ, ನಾಗರಿಕ ಪೂರೈಕೆ ಮತ್ತು ಗ್ರಾಹಕ ವ್ಯವಹಾರಗಳ ಖಾತೆ ಸಚಿವ ರಿಝ್ವಾನ್ ಅರ್ಶದ್ ಅವರು ಮಾತನಾಡಿ, ‘ಪಡಿತರ ಚೀಟಿಗಳಿಗೆ ಇ-ಕೆವೈಸಿ ಮಾಡಿಸಲು ಹಣಕ್ಕೆ ಬೇಡಿಕೆ ಇಡುವ ನ್ಯಾಯಬೆಲೆ ಅಂಗಡಿಗಳ ವಿರುದ್ದ ನಿರ್ದಾಕ್ಷಿಣ್ಯವಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.






