Bengaluru | ಬಿಸಿಯೂಟ ನೌಕರರ ಗೌರವಧನ 7 ಸಾವಿರ ರೂ.ಗೆ ಹೆಚ್ಚಿಸಲು ಆಗ್ರಹ

ಬೆಂಗಳೂರು : ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಸರಕಾರ ತನ್ನ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಬಿಸಿಯೂಟ ನೌಕರರಿಗೆ ಕನಿಷ್ಠ ಏಳು ಸಾವಿರ ರೂ. ಗೌರವಧನ ನೀಡುವುದು ಸೇರಿದಂತೆ ಇನ್ನಿತರೇ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ(ಸಿಐಟಿಯು) ನೇತೃತ್ವದಲ್ಲಿ ಬುಧವಾರ ಫ್ರೀಡಂ ಪಾರ್ಕ್‍ನಲ್ಲಿ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿತ್ತು.
ಧರಣಿಯಲ್ಲಿ ಭಾಗವಹಿಸಿ ಮಾತನಾಡಿದ ಸಂಘದ ರಾಜ್ಯಾಧ್ಯಕ್ಷೆ ಎಸ್.ವರಲಕ್ಷ್ಮಿ, ರಾಜ್ಯದ ಸರಕಾರಿ ಶಾಲೆಗಳಲ್ಲಿ ಹಲವು ವರ್ಷಗಳಿಂದ ಬಿಸಿಯೂಟ ತಯಾರಿಕೆ ಮತ್ತು ವಿತರಣೆ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ನೌಕರರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಕಡಿಮೆ ಗೌರವಧನಕ್ಕೆ ದುಡಿಯುತ್ತಿರುವ ಅಡುಗೆ ಸಿಬ್ಬಂದಿಗೆ ಉದ್ಯೋಗ ಭದ್ರತೆಯೂ ಇಲ್ಲ. ಶಾಲೆಗಳ ವಿಲೀನ, ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುವುದು ಹಾಗೂ ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೊಳಿಸುವ ಪ್ರಸ್ತಾಪಗಳಿಂದ ನೌಕರರ ಉದ್ಯೋಗಕ್ಕೆ ಆತಂಕ ಎದುರಾಗಿದೆ ಎಂದರು.
2026ರ ನ.7ರಂದು ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಬಿಸಿಯೂಟ ನೌಕರರ ಸಮಸ್ಯೆಗಳು ಹಾಗೂ ಬೇಡಿಕೆಗಳನ್ನು ಪ್ರಸ್ತಾಪಿಸಲಾಗಿತ್ತು. ಆದರೂ ನೌಕರರ ಸಮಸ್ಯೆಗಳಿಗೆ ಸಮರ್ಪಕ ಪರಿಹಾರ ದೊರೆತಿಲ್ಲ. ಹೀಗಾಗಿ ಸರಕಾರ ಕೂಡಲೇ ಮಧ್ಯಪ್ರವೇಶಿಸಿ ಬೇಡಿಕೆಗಳನ್ನು ಈಡೇರಿಸಬೇಕು. ಪ್ರಸ್ತುತ 4:30 ಗಂಟೆಗಳಿರುವ ಕೆಲಸದ ಅವಧಿಯನ್ನು 6 ಗಂಟೆಗಳಿಗೆ ಹೆಚ್ಚಿಸಿ ಆದೇಶ ಹೊರಡಿಸಬೇಕು. ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೊಳಿಸುವ ಬದಲು ಈಗಿರುವ ಬಿಸಿಯೂಟ ನೌಕರರಿಂದಲೇ ಅಡುಗೆ ತಯಾರಿಕೆ ಮತ್ತು ವಿತರಣೆಯ ಜವಾಬ್ದಾರಿ ನಿರ್ವಹಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ವರಲಕ್ಷ್ಮಿ ಆಗ್ರಹಿಸಿದರು.
ಉತ್ತರ ಪ್ರದೇಶ ಮತ್ತು ಪಂಜಾಬ್ ರಾಜ್ಯಗಳ ಹೈಕೋರ್ಟ್ ತೀರ್ಪಿನಂತೆ ವರ್ಷದ 12 ತಿಂಗಳ ಕೆಲಸ ಹಾಗೂ ಕನಿಷ್ಠ ಕೂಲಿ ನೀಡಬೇಕು. ಬೇಸಿಗೆ ಮತ್ತು ದಸರಾ ರಜೆ ಹಾಗೂ ಬುನಾದಿ ಸಂದರ್ಭದಲ್ಲಿ ವೇತನವನ್ನು ಕಡ್ಡಾಯವಾಗಿ ನೀಡಬೇಕು. ಶಾಲೆಗಳಲ್ಲಿ ಗ್ರೂಪ್ 'ಡಿ' ನೌಕರರು ಇಲ್ಲದಿರುವುದರಿಂದ ಬಿಸಿಯೂಟ ನೌಕರರಿಂದಲೇ ಶಾಲಾ ಸ್ವಚ್ಛತೆ, ಕೈತೋಟ ನಿರ್ವಹಣೆ, ಶಾಲಾ ಸಮಯದ ಗಂಟೆ ಬಾರಿಸುವುದು ಸೇರಿದಂತೆ ಇತರ ಕೆಲಸಗಳನ್ನು ಮಾಡಿಸಲಾಗುತ್ತಿದೆ. ಈ ನೌಕರರನ್ನು ಶಾಲಾ ಸಿಬ್ಬಂದಿಯೆಂದು ಪರಿಗಣಿಸಿ ನೇಮಕಾತಿ ಆದೇಶ ನೀಡಬೇಕು. ಪ್ರತಿ ಶಾಲೆಯಲ್ಲಿ ಕನಿಷ್ಠ ಇಬ್ಬರು ಅಡುಗೆ ಸಿಬ್ಬಂದಿ ಇರಬೇಕು. ಕೆಲಸದ ಸ್ಥಳದಲ್ಲಿ ಮರಣ ಹೊಂದಿದರೆ 25 ಲಕ್ಷ ರೂ. ಪರಿಹಾರ ನೀಡಬೇಕು ಎಂದು ವರಲಕ್ಷ್ಮಿ ಆಗ್ರಹಿಸಿದರು.
ಧರಣಿಯಲ್ಲಿ ಸಂಘದ ಅಧ್ಯಕ್ಷೆ ಲಕ್ಷ್ಮಿದೇವಿ, ಪ್ರಧಾನ ಕಾರ್ಯದರ್ಶಿ ಮಾಲಿನಿ ಮೇಸ್ತ ಸೇರಿದಂತೆ ಹಲವರು ಭಾಗವಹಿಸಿದ್ದರು.






