Bengaluru | ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಅಪ್ರಾಪ್ತ ಪ್ರೇಮಿಗಳ ರಕ್ಷಣೆ

ಸಾಂದರ್ಭಿಕ ಚಿತ್ರ | Photo credit : AI
ಬೆಂಗಳೂರು: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಅಪ್ರಾಪ್ತ ಪ್ರೇಮಿಗಳನ್ನು ಕೊತ್ತನೂರು ಠಾಣೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ.
ಘಟನೆ ಏನು? :
ನಿನ್ನೆ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯ ಕಾಲೇಜೊಂದರಲ್ಲಿ ಅಪ್ರಾಪ್ತ ಯುವಕ ಮತ್ತು ಯುವತಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ವೇಳೆ ವಿಷ ಸೇವಿಸಿದ್ದ ಯುವಕ ತನ್ನ ತಂದೆಗೆ ಕರೆ ಮಾಡಿ ತಾನು ಆತ್ಮಹತ್ಯೆಗೆ ಯತ್ನಿಸುತ್ತಿರುವುದಾಗಿ ತಿಳಿಸಿದ್ದಾನೆ.
ಕೂಡಲೇ ಯುವಕನ ತಂದೆ ತುರ್ತು ಸಹಾಯವಾಣಿ 112ಕ್ಕೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಯುವಕನ ಮೊಬೈಲ್ ಸಂಖ್ಯೆಯನ್ನು ಪಡೆದು ಆತನ ಸ್ಥಳವನ್ನು ಪತ್ತೆಹಚ್ಚಿದ್ದಾರೆ. ಬಳಿಕ ಸಮೀಪದಲ್ಲಿದ್ದ ಬೈಕ್ ಹೊಯ್ಸಳ ಸಿಬ್ಬಂದಿಯನ್ನು ಸ್ಥಳಕ್ಕೆ ರವಾನಿಸಿದ್ದಾರೆ.
ಸ್ಥಳಕ್ಕೆ ತೆರಳಿದ ಬೈಕ್ ಹೊಯ್ಸಳ ಸಿಬ್ಬಂದಿಗೆ ಕಾಲೇಜಿನ ಮೂಲೆಯೊಂದರಲ್ಲಿ ಯುವಕ ಮತ್ತು ಯುವತಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬಂದಿದೆ. ಕೂಡಲೇ ಸ್ಥಳೀಯ ಕಾಲೇಜು ವಿದ್ಯಾರ್ಥಿಗಳ ನೆರವಿನಿಂದ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಈ ಸಂಬಂಧ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.






