Bengaluru | ವೃದ್ಧೆಯನ್ನು ಕೊಲೆಗೈದು ಚಿನ್ನಾಭರಣ, ನಗದು ದೋಚಿ ದುಷ್ಕರ್ಮಿಗಳು ಪರಾರಿ

ಮೃತ ಮಹಿಳೆ ವೆಂಕಟಲಕ್ಷ್ಮಮ್ಮ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ವೃದ್ಧೆಯ ಮನೆಗೆ ನುಗ್ಗಿದ ದುಷ್ಕರ್ಮಿಗಳು ಅವರನ್ನು ಕೊಲೆ ಮಾಡಿ, ಮನೆಯಲ್ಲಿದ್ದ ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾಗಿರುವ ಘಟನೆ ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಗುಡ್ಡದಹಳ್ಳಿಯಲ್ಲಿ ನಡೆದಿದೆ.
ಮೃತರನ್ನು ವೆಂಕಟಲಕ್ಷ್ಮಮ್ಮ (70) ಎಂದು ಗುರುತಿಸಲಾಗಿದೆ. ಹೊಸಗುಡ್ಡದಹಳ್ಳಿಯಲ್ಲಿ ನಾಲ್ಕು ಮನೆಗಳನ್ನು ಹೊಂದಿದ್ದ ಅವರು, ಒಂದು ಮನೆಯಲ್ಲಿ ವಾಸಿಸುತ್ತಿದ್ದರು. ಮತ್ತೊಂದು ಮನೆಯನ್ನು ಬಾಡಿಗೆಗೆ ನೀಡಿದ್ದರೆ, ಉಳಿದ ಎರಡು ಮನೆಗಳು ಖಾಲಿ ಇದ್ದವು.
ಇಂದು ಬಾಡಿಗೆ ಮನೆಯಲ್ಲಿದ್ದ ಯುವಕ ವೆಂಕಟಲಕ್ಷ್ಮಮ್ಮ ಅವರ ಮನೆಗೆ ಹೋದಾಗ ಘಟನೆ ಬೆಳಕಿಗೆ ಬಂದಿದೆ. ಮಾರಕಾಸ್ತ್ರಗಳೊಂದಿಗೆ ಮನೆಗೆ ನುಗ್ಗಿದ ದುಷ್ಕರ್ಮಿಗಳು ವೃದ್ಧೆಯನ್ನು ಕೊಲೆ ಮಾಡಿ, ಬೀರುವಿನಲ್ಲಿದ್ದ ಚಿನ್ನಾಭರಣ ಹಾಗೂ ನಗದನ್ನು ಕದ್ದು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಸಂಗ್ರಹಿಸಿ ಪರಿಶೀಲಿಸುತ್ತಿದ್ದು, ಆರೋಪಿಗಳ ಪತ್ತೆಗಾಗಿ ತನಿಖೆ ನಡೆಸುತ್ತಿದ್ದಾರೆ.






