Bengaluru | ಹಾಡಹಗಲೇ ರಿಯಲ್ ಎಸ್ಟೇಟ್ ಉದ್ಯಮಿಯ ಹತ್ಯೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ಹಾಡಹಗಲೇ ಕುಟುಂಬದವರ ಎದುರೇ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿರುವ ಘಟನೆ ಶುಕ್ರವಾರ ವರದಿಯಾಗಿದೆ.
ಮೃತರನ್ನು ಚರಣ್ ಗೌಡ (39) ಎಂದು ಗುರುತಿಸಲಾಗಿದೆ.
ಇಂದು ಬೆಳಗ್ಗೆ ಸುಮಾರು 10.30ರ ವೇಳೆಗೆ ಯಲಹಂಕ ನ್ಯೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಪಂಜಾಬ್ ನ್ಯಾಷನಲ್ ಬ್ಯಾಂಕ್ ಸಮೀಪ ಚರಣ್ ಗೌಡ ಅವರು ಕುಟುಂಬದವರೊಂದಿಗೆ ಬಂದಿದ್ದರು. ಈ ವೇಳೆ ಮಾರಕಾಸ್ತ್ರಗಳನ್ನು ಹಿಡಿದು ಬಂದ ಇಬ್ಬರು ದುಷ್ಕರ್ಮಿಗಳು ಕುಟುಂಬದವರ ಎದುರೇ ಚರಣ್ ಗೌಡ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಹಲ್ಲೆಯ ತೀವ್ರತೆಗೆ ಚರಣ್ ಗೌಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೃತ್ಯ ಎಸಗಿದ ಬಳಿಕ ದುಷ್ಕರ್ಮಿಗಳು ಮಾರಕಾಸ್ತ್ರಗಳೊಂದಿಗೆ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಹಳೆಯ ದ್ವೇಷ ಕೊಲೆಗೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ರಿಯಲ್ ಎಸ್ಟೇಟ್ ಉದ್ಯಮದಲ್ಲಿ ಚರಣ್ ಗೌಡ ಅವರಿಗೆ ವೈಷಮ್ಯಗಳಿದ್ದವು ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಕೃತ್ಯ ನಡೆದಿರಬಹುದು ಎಂದು ಅಂದಾಜಿಸಲಾಗಿದೆ. ಆದರೆ, ಕೊಲೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.
ಘಟನಾ ಸ್ಥಳಕ್ಕೆ ಯಲಹಂಕ ನ್ಯೂಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿದ್ದಾರೆ.






