Bengaluru | ದ್ವಿಚಕ್ರ ವಾಹನ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

ಸಾಂದರ್ಭಿಕ ಚಿತ್ರ
ಬೆಂಗಳೂರು : ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ ಬಸವನಗುಡಿ ಠಾಣಾ ಪೊಲೀಸರು, 1.20 ಲಕ್ಷ ರೂ. ಮೌಲ್ಯದ ಏಳು ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಿದ್ದಾರೆ.
ಕೆ.ಜಿ.ನಗರದ ನಿವಾಸಿಯೊಬ್ಬರು ಕನ್ಸರ್ವೆನ್ಸಿ ರಸ್ತೆಯಲ್ಲಿ ದ್ವಿಚಕ್ರ ವಾಹನವನ್ನು ನಿಲ್ಲಿಸಿದ್ದು, ಅದೇ ದಿನ ಸಂಜೆ ವಾಪಸ್ ಬಂದು ನೋಡಿದಾಗ, ಯಾರೋ ಅಪರಿಚಿತರು ದ್ವಿಚಕ್ರ ವಾಹನವನ್ನು ಕಳ್ಳತನ ಮಾಡಿಕೊಂಡು ಹೋಗಿದ್ದಾರೆ ಎಂದು ಬಸವನಗುಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಅದರಂತೆ ಠಾಣೆಯಲ್ಲಿ ದ್ವಿಚಕ್ರ ವಾಹನ ಕಳವು ಪ್ರಕರಣ ದಾಖಲಾಗಿದೆ.
ವಿವಿಧ ಆಯಾಮಗಳಲ್ಲಿ ಪ್ರಕರಣದ ತನಿಖೆಯನ್ನು ಕೈಗೊಂಡು, ಖಚಿತ ಮಾಹಿತಿಯನ್ನು ಕಲೆಹಾಕಿ, ಆರ್ಮುಗಂ ಸರ್ಕಲ್ನ ಗ್ಯಾರೇಜ್ವೊಂದರ ಬಳಿ ಪ್ರಕರಣದಲ್ಲಿ ಕಳವಾಗಿದ್ದ ಒಂದು ದ್ವಿ-ಚಕ್ರ ವಾಹನ ಸಮೇತ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಅವರನ್ನು ವಿಚಾರಣೆಗೊಳಪಡಿಸಿದಾಗ, ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ನಂತರ ಆರೋಪಿಗಳು ನೀಡಿದ ಮಾಹಿತಿ ಮೇರೆಗೆ 6 ದ್ವಿ-ಚಕ್ರ ವಾಹನಗಳನ್ನು ಬಸವನಗುಡಿಯ ಆಂಜನೇಯ ದೇವಸ್ಥಾನದ ರಸ್ತೆಯ ಪಕ್ಕದ ಖಾಲಿ ಜಾಗದಿಂದ ವಶಕ್ಕೆ ಪಡೆದುಕೊಳ್ಳಲಾಗಿದೆ.
ಆರೋಪಿಗಳ ಬಂಧನದಿಂದ ಬಸವನಗುಡಿ ಪೊಲೀಸ್ ಠಾಣೆಯ 2 ಪ್ರಕರಣ ಹಾಗೂ ತಿಲಕ್ನಗರ ಪೊಲೀಸ್ ಠಾಣೆಯ 1 ಪ್ರಕರಣ ಸೇರಿದಂತೆ ಒಟ್ಟು 3 ದ್ವಿಚಕ್ರ ವಾಹನ ಕಳವು ಪ್ರಕರಣಗಳು ಪತ್ತೆಯಾಗಿದ್ದು, ಉಳಿದ 4 ದ್ವಿಚಕ್ರ ವಾಹನಗಳ ಮಾಲಕರ ಪತ್ತೆ ಕಾರ್ಯ ಮುಂದುವರೆದಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿದಿದ್ದಾರೆ.






