Bengaluru | ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿಣಿಗೆ ವಿಶೇಷ ಆಹ್ವಾನಿತರಾಗಿ ವೈ.ಎಸ್.ಎ.ಸ್ವಾಮಿ ನೇಮಕ

ಬೆಂಗಳೂರು : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿಣಿಯ ವಿಶೇಷ ಆಹ್ವಾನಿತರಾಗಿ ಹಿರಿಯ ಪತ್ರಕರ್ತ ವೈ.ಎಸ್.ಎಲ್.ಸ್ವಾಮಿ ಅವರನ್ನು ನೇಮಕ ಮಾಡಲಾಗಿದ್ದು, ಮಂಗಳವಾರ ಆದೇಶ ಪತ್ರ ವಿತರಿಸಲಾಯಿತು.
ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ನಿರ್ದೇಶನದ ಮೇರೆಗೆ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ್ ಅವರ ಅನುಮೋದನೆಯೊಂದಿಗೆ ನೇಮಕಾತಿ ಆದೇಶ ಹೊರಡಿಸಲಾಗಿದೆ.
ವೈ.ಎಸ್.ಎಲ್. ಸ್ವಾಮಿ ಅವರು ಮೂರು ದಶಕಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದು, ಪತ್ರಕರ್ತರ ಹಿತರಕ್ಷಣೆ ಹಾಗೂ ಸಂಘದ ವಿವಿಧ ರಚನಾತ್ಮಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಅವರ ಅನುಭವ, ಸೇವೆ ಮತ್ತು ಸಂಘಟನಾ ಚತುರತೆಯನ್ನು ಪರಿಗಣಿಸಿ ಈ ಜವಾಬ್ದಾರಿ ನೀಡಲಾಗಿದೆ ಎಂದು ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದರು.
ನೂತನ ಜವಾಬ್ದಾರಿಯಿಂದ ಪತ್ರಕರ್ತರ ಸಮಸ್ಯೆಗಳಿಗೆ ಸ್ಪಂದಿಸುವುದರ ಜೊತೆಗೆ ಬೆಂಗಳೂರು ನಗರ ಜಿಲ್ಲೆಯಲ್ಲಿ ಸಂಘವನ್ನು ಮತ್ತಷ್ಟು ಬಲಪಡಿಸುವಲ್ಲಿ ಸ್ವಾಮಿ ಅವರು ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂದು ಬೆಂಗಳೂರು ನಗರ ಜಿಲ್ಲಾ ಅಧ್ಯಕ್ಷ ಎಸ್. ಸೋಮಶೇಖರ್ ಗಾಂಧಿ ವಿಶ್ವಾಸ ವ್ಯಕ್ತಪಡಿಸಿದರು.
ನೂತನವಾಗಿ ನೇಮಕಗೊಂಡ ವೈ.ಎಸ್.ಎಲ್.ಸ್ವಾಮಿ ಅವರಿಗೆ ಸಂಘದ ಪದಾಧಿಕಾರಿಗಳು, ಸದಸ್ಯರು ಹಾಗೂ ಹಿರಿಯ ಪತ್ರಕರ್ತರು ಅಭಿನಂದನೆ ಸಲ್ಲಿಸಿದರು.
ರಾಜ್ಯ ಖಜಾಂಚಿ ವಾಸುದೇವ ಹೊಳ್ಳ, ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್. ಜಯಕುಮಾರ್ ಗೌಡ, ರಾಜ್ಯಕಾರ್ಯಕಾರಿಣಿ ಸದಸ್ಯ ರವೀಶ್ ಎಚ್.ಆರ್, ಬೆಂಗಳೂರು ನಗರ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರುಗಳಾದ ಎನ್.ಶಿವಾನಂದ, ಹನುಮಂತರಾಜು ಬಿ ಕೆ, ಟಿ ಮಂಜುನಾಥ್, ನಗರ ಜಿಲ್ಲಾ ಚುನಾವಣಾಧಿಕಾರಿಯಾಗಿದ್ದ ವಿ ನಂಜುಂಡಪ್ಪ ಮತ್ತಿತರು ಉಪಸ್ಥಿತರಿದ್ದರು






