ಬಿ.ಕೆ.ಹರಿಪ್ರಸಾದ್ ಅಮಾನತಿಗೆ ಬಿಜೆಪಿ ಪಟ್ಟು : ವಿಧಾನಪರಿಷತ್‌ನಲ್ಲಿ ಗದ್ದಲ

ಬೆಂಗಳೂರು : ಕಾಂಗ್ರೆಸ್ ಸದಸ್ಯರು ರಾಜ್ಯಪಾಲರನ್ನು ಅಡ್ಡಗಟ್ಟಿದ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಅಮಾನತು ಮಾಡಬೇಕು ಎಂದು ಬಿಜೆಪಿ ಸದಸ್ಯರು ಒತ್ತಾಯಿಸಿದ ಹಿನ್ನೆಲೆಯಲ್ಲಿ ವಿಧಾನಪರಿಷತ್‌ನಲ್ಲಿ ಭಾರೀ ಗದ್ದಲ ಉಂಟಾಯಿತು.
ರಾಜ್ಯಪಾಲರು ಆಗಮಿಸಿದ ವೇಳೆ ಕಾಂಗ್ರೆಸ್ (‘ಕೈ’) ಸದಸ್ಯರು ತೋರಿದ ಗೂಂಡಾ ವರ್ತನೆ ಸರಿಯಲ್ಲ ಎಂದು ಆರೋಪಿಸಿದ ಬಿಜೆಪಿ ಸದಸ್ಯರು,ಬಿ.ಕೆ. ಹರಿಪ್ರಸಾದ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಈ ವಿಷಯಕ್ಕೆ ಸಂಬಂಧಿಸಿದಂತೆ ಮುಂಚಿತ ನೋಟಿಸ್ ನೀಡಲಾಗಿಲ್ಲ. ಹೀಗಾಗಿ ಚರ್ಚೆಗೆ ಅವಕಾಶ ನೀಡಲಾಗುವುದಿಲ್ಲ ಎಂದು ಸಭಾಪತಿ ಬಸವರಾಜ ಹೊರಟ್ಟಿ ಸ್ಪಷ್ಟಪಡಿಸಿದರು. ಇದರಿಂದ ಅಸಮಾಧಾನಗೊಂಡ ಬಿಜೆಪಿ ಸದಸ್ಯರು ಕಾಂಗ್ರೆಸ್ ವಿರುದ್ಧ ಧಿಕ್ಕಾರ ಘೋಷಣೆ ಕೂಗಿದರು.
ಇದರಿಂದ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷದ ಸದಸ್ಯರ ನಡುವೆ ತೀವ್ರ ವಾಗ್ವಾದ ನಡೆಯಿತು. ಪರಿಸ್ಥಿತಿ ನಿಯಂತ್ರಣ ತಪ್ಪುವ ಹಂತಕ್ಕೆ ತಲುಪಿದ್ದರಿಂದ ಸಭಾಪತಿ ಬಸವರಾಜ ಹೊರಟ್ಟಿ ವಿಧಾನಪರಿಷತ್ ಕಲಾಪವನ್ನು ಕೆಲಕಾಲ ಮುಂದೂಡಿದರು.





