ಬಿ.ಕೆ.ಹರಿಪ್ರಸಾದ್‍ಗೆ ಡಿಸಿಎಂ ಸ್ಥಾನ ನೀಡುವಂತೆ ಆಗ್ರಹ

ಬೆಂಗಳೂರು : ಹಿಂದುಳಿದ ವರ್ಗಗಳ ಪ್ರಾತಿನಿಧ್ಯಕ್ಕಾಗಿ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ ಆಗ್ರಹಿಸಿದೆ.
ರವಿವಾರ ಈ ಕುರಿತು ಪ್ರಕಟನೆ ನೀಡಿರುವ ಸಮಿತಿಯ ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಕರ್ನಾಟಕದಲ್ಲಿ ಸಾಮಾಜಿಕ ನ್ಯಾಯ, ಸಮಾನ ಪ್ರಾತಿನಿಧ್ಯ ಹಾಗೂ ಹಿಂದುಳಿದ ವರ್ಗಗಳ ರಾಜಕೀಯ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡುವ ನಿಟ್ಟಿನಲ್ಲಿ ವಿಧಾನ ಪರಿಷತ್ ಬಿ.ಕೆ.ಹರಿಪ್ರಸಾದ್ ಅವರನ್ನು ಹಿಂದುಳಿದ ವರ್ಗದ ಕೋಟಾದಡಿ ಉಪ ಮುಖ್ಯಮಂತ್ರಿಯನ್ನಾಗಿ ನೇಮಕ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಬಿ.ಕೆ.ಹರಿಪ್ರಸಾದ್ ಅವರು ಹಲವು ದಶಕಗಳಿಂದ ಕಾಂಗ್ರೆಸ್ ಪಕ್ಷದ ಸಂಘಟನೆ ಮತ್ತು ರಾಜಕೀಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಪಕ್ಷದ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದಾರೆ. ವಿದ್ಯಾರ್ಥಿ ರಾಜಕೀಯದಿಂದ ರಾಷ್ಟ್ರೀಯ ಮಟ್ಟದ ಜವಾಬ್ಧಾರಿಗಳವರೆಗೆ ಯಶಸ್ವಿಯಾಗಿ ತಮ್ಮ ಕೆಲಸವನ್ನು ನಿರ್ವಹಿಸಿರುವ ಅವರು, ನಿಷ್ಠಾವಂತ, ಅನುಭವಿ ಹಾಗೂ ದೂರದೃಷ್ಟಿಯ ನಾಯಕರಾಗಿ ಗುರುತಿಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ದೀರ್ಘಕಾಲದ ರಾಜಕೀಯ ಅನುಭವ, ಸಂಘಟನಾ ಚಾತುರ್ಯ ಹಾಗೂ ಜನಪರ ಕಾಳಜಿಯ ಮೂಲಕ ಬಿ.ಕೆ.ಹರಿಪ್ರಸಾದ್ ಅವರು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ವಿಶಿಷ್ಟ ಛಾಪು ಮೂಡಿಸಿದ್ದಾರೆ. ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ವಿವಿಧ ಭಾಗಗಳ ಜನರ ಸಮಸ್ಯೆಗಳಿಗೆ ಸ್ಪಂದಿಸಿ, ಹಿಂದುಳಿದವರು, ಅಲ್ಪಸಂಖ್ಯಾತರು ಹಾಗೂ ಸಮಾಜದ ಎಲ್ಲ ವರ್ಗಗಳ ಧ್ವನಿಯಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ಹೇಳಿದ್ದಾರೆ.
ಬಿಲ್ಲವ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಿ: ‘ದಕ್ಷಿಣ ಕನ್ನಡ, ಉಡುಪಿಯೂ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಬಿಲ್ಲವರು ಬಹುಸಂಖ್ಯಾಂತರಾಗಿದ್ದು, ಈ ಸಮಾಜಕ್ಕೆ ಹಲವು ವರ್ಷಗಳಿಂದ ಸರಕಾರದಲ್ಲಿ ಸೂಕ್ತ ಪ್ರಾತಿನಿಧ್ಯ ದೊರಕಿಲ್ಲ. ಆದ್ದರಿಂದ ಬಿಲ್ಲವ ಸಮುದಾಯದ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಅವರನ್ನು ಕರ್ನಾಟಕದ ಉಪಮುಖ್ಯ ಮಂತ್ರಿಯನ್ನಾಗಿ ನೇಮಕ ಮಾಡಿ ಅವಕಾಶ ವಂಚಿತ ಬಿಲ್ಲವ ಸಮುದಾಯಕ್ಕೆ ಸಾಮಾಜಿಕ ನ್ಯಾಯದಂತೆ ಹಾಗೂ ಸೂಕ್ತ ರಾಜಕೀಯ ಪ್ರತಿನಿಧ್ಯತೆಯನ್ನು ನೀಡಬೇಕು’ ಎಂದು ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಪ್ರದಾನ ಕಾರ್ಯದರ್ಶಿ ಜಯಾನಂದ ಎಂ ಆಗ್ರಹಿಸಿದ್ದಾರೆ.






