ವಿಜಯ್ ಹಜಾರೆ ಟ್ರೋಫಿ | ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಅನುಮತಿ ನಿರಾಕರಣೆ

File Photo: PTI
ಬೆಂಗಳೂರು : ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಡಿ.24ರಂದು ನಡೆಯಬೇಕಿದ್ದ ದೇಶೀಯ ಕ್ರಿಕೆಟ್ ಪಂದ್ಯ ‘ವಿಜಯ್ ಹಜಾರೆ ಟ್ರೋಫಿ’ಗೆ ಅನುಮತಿ ನೀಡಲು ನಗರ ಪೊಲೀಸರು ನಿರಾಕರಿಸಿದ್ದು, ಕೆಂಪೇಗೌಡ ವಿಮಾನ ನಿಲ್ದಾಣದ ಸಮೀಪ ಇರುವ ಸೆಂಟರ್ ಆಫ್ ಎಕ್ಸೆಲೆನ್ಸ್ ಮೈದಾನದಲ್ಲಿ ಈ ಪಂದ್ಯ ನಡೆಯಲಿದೆ ಎಂದು ವರದಿಯಾಗಿದೆ.
ಜೂನ್ನಲ್ಲಿ ಆರ್ಸಿಬಿ ವಿಜಯೋತ್ಸವ ವೇಳೆ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಗೇಟ್ ಹೊರಭಾಗದಲ್ಲಿಯೇ ಕಾಲ್ತುಳಿತ ದುರಂತ ಸಂಭವಿಸಿತ್ತು. ಬಳಿಕ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳನ್ನು ಸ್ಥಗಿತಗೊಳಿಸಲಾಯಿತು. ಆದರೆ ಪ್ರೇಕ್ಷಕರಿಗೆ ಅವಕಾಶ ಇಲ್ಲದೇ ಪಂದ್ಯ ಆಯೋಜಿಸಲು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಮುಖ್ಯಸ್ಥ ವೆಂಕಟೇಶ್ ಪ್ರಸಾದ್ ಗೃಹ ಸಚಿವ ಪರಮೇಶ್ವರ್ ಅವರಿಗೆ ಮನವಿ ಮಾಡಿದ್ದರು.
ಪಂದ್ಯ ನಡೆಸುವ ಸಂಬಂಧ ಸೋಮವಾರ ಬೆಂಗಳೂರು ಆಯುಕ್ತ ಸೀಮಂತ್ ಕುಮಾರ್, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದರು. ಅಗ್ನಿಶಾಮಕ ದಳದ ಅಧಿಕಾರಿಗಳು ಕ್ರೀಡಾಂಗಣಕ್ಕೆ ಆಗಮಿಸಿ ಸುರಕ್ಷತೆ ಬಗ್ಗೆ ಪರಿಶೀಲನೆ ನಡೆಸಿದ್ದರು. ಪರಿಶೀಲನೆಯ ಬಳಿಕ ಈ ತಂಡ ಸರಕಾರಕ್ಕೆ ವರದಿ ನೀಡಿತ್ತು. ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಪಂದ್ಯಕ್ಕೆ ಅಂತಿಮವಾಗಿ ಬೆಂಗಳೂರು ಪೊಲೀಸರು ಅನುಮತಿ ನಿರಾಕರಿಸಿದ್ದಾರೆ.





