ಇಂದು ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ: ರಾಜ್ಯಪಾಲರನ್ನು ಭೇಟಿಯಾದ ಡಿಕೆಶಿ

ಬೆಂಗಳೂರು, ಮೇ 30: ಕಾಂಗ್ರೆಸ್ ಪಕ್ಷದ ನೂತನ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗಾಗಿ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ ಪಿ) ಸಭೆಯು ಇಂದು (ಮೇ 30) ಸಂಜೆ 4ಕ್ಕೆ ನಡೆಯಲಿದೆ.
ವಿಧಾನಸೌಧದ 3ನೇ ಮಹಡಿಯಲ್ಲಿರುವ ಸಮ್ಮೇಳನ ಸಭಾಂಗಣದಲ್ಲಿ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ.
ಸಭೆಯಲ್ಲಿ ಸಂಭಾವ್ಯ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹಾಗೂ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಭಾಗವಹಿಸಲಿದ್ದಾರೆ.
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿರುವ ರಾಜೀನಾಮೆಯನ್ನು ಶುಕ್ರವಾರ ಅಂಗೀಕರಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ರಾಜ್ಯ ಸಚಿವ ಸಂಪುಟವನ್ನು ವಿಸರ್ಜಿಸಿದ್ದಾರೆ.
ಮೂಲಗಳ ಪ್ರಕಾರ, ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಖಚಿತ ಎಂದು ಹೇಳಲಾಗುತ್ತಿದೆ. ಡಿಕೆಶಿ ಹೆಸರನ್ನು ಸಿದ್ದರಾಮಯ್ಯ ಸೂಚಿಸಲಿದ್ದಾರೆ.
ಸಿಎಲ್ ಪಿ ಸಭೆ ಮುನ್ನವೇ ಲೋಕಭವನದಲ್ಲಿ ರಾಜ್ಯಪಾಲ ಗೆಹ್ಲೋಟ್ ಅವರನ್ನು ಡಿ.ಕೆ.ಶಿವಕುಮಾರ್ ಭೇಟಿಯಾಗಿದ್ದಾರೆ.
ಸಹೋದರ ಡಿ.ಕೆ.ಸುರೇಶ್ ಜೊತೆ ರಾಜ್ಯಪಾಲರನ್ನು ಭೇಟಿಯಾದ ಡಿ.ಕೆ.ಶಿವಕುಮಾರ್ ಅನೌಪಚಾರಿಕ ಮಾತುಕತೆ ನಡೆಸಿದ್ದಾರೆ.






