ರಾಜ್ಯಕ್ಕೆ ಬರ ಪರಿಹಾರ ಕೋರಿ ಕೇಂದ್ರಕ್ಕೆ ಸಿಎಂ ಡಿ.ಕೆ.ಶಿವಕುಮಾರ್ ಪತ್ರ

ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಮುಂಗಾರು ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಕೇಂದ್ರ ಸರಕಾರ ತಕ್ಷಣವೇ ಮಧ್ಯಂತರ ಬರ ಪರಿಹಾರ ಕೋರಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಬುಧವಾರ ಎರಡು ಪುಟಗಳ ಸುದೀರ್ಘ ಪತ್ರ ಬರೆದಿರುವ ಡಿ.ಕೆ.ಶಿವಕುಮಾರ್ ಅವರು, ಸೆಪ್ಟಂಬರ್ 10ರಂದು ಸಲ್ಲಿಸಲಾಗಿದ್ದ ಮನವಿಯಲ್ಲಿ 101 ತಾಲೂಕುಗಳಿಗೆ 3,705ಕೋಟಿ ರೂ. ಪರಿಹಾರ ಕೋರಲಾಗಿತ್ತು. ಆದರೆ, ಬರ ಸ್ಥಿತಿ ಉಲ್ಬಣಗೊಂಡ ಹಿನ್ನೆಲೆಯಲ್ಲಿ ವೈಜ್ಞಾನಿಕ ಸಮೀಕ್ಷೆ ನಡೆಸಿ ಹೆಚ್ಚುವರಿಯಾಗಿ 76 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಲಾಗಿದೆ.
ಇದರಿಂದಾಗಿ ಕರ್ನಾಟಕ ರಾಜ್ಯದಲ್ಲಿ ಪ್ರಸ್ತುತ ಬರ ಪೀಡಿತ ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆಯಾಗಿದ್ದು, ಮುಂಗಾರು ಹಂಗಾಮಿನ ಅಂತ್ಯದ ವೇಳೆಗೆ ಈ ತಾಲೂಕುಗಳ ಸಂಖ್ಯೆ 200 ದಾಟುವ ಸಾಧ್ಯತೆಯಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಕೇಂದ್ರ ಅಧ್ಯಯನ ತಂಡ ಖುದ್ದು ಪರಿಶೀಲನೆಗೆ ಸಮಯ ಹಿಡಿಯುವುದರಿಂದ, ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರ ಒದಗಿಸಲು ಕೋರಲಾದ ಮೊತ್ತದ ಶೇ.50ರಷ್ಟನ್ನು ಮಧ್ಯಂತರ ಆರ್ಥಿಕ ನೆರವನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದಾರೆ.
ಮುಂಗಾರು ಮಳೆ ಕೊರತೆಯಿಂದಾಗಿ ರಾಜ್ಯದಲ್ಲಿ ಕೃಷಿ, ಜಲ ವಿದ್ಯುತ್, ಜಾನುವಾರು ಮೇವು ಹಾಗೂ ಅಂತರ್ಜಲ ಮಟ್ಟ ಕುಸಿದಿದ್ದು, ಸರಿಸುಮಾರು 40 ಲಕ್ಷ ಹೆಕ್ಟೇರ್‌ಗೂ ಹೆಚ್ಚಿನ ಕೃಷಿ ಬೆಳೆ ನಾಶವಾಗುವ ಭೀತಿ ಆವರಿಸಿದೆ. ಅಲ್ಲದೇ, ಕಾವೇರಿ ಜಲಾನಯನ ಪ್ರದೇಶದ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕುಸಿದಿರುವುದರಿಂದ ಮುಂಬರುವ ದಿನಗಳಲ್ಲಿ ರಾಜಧಾನಿ ಬೆಂಗಳೂರು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಅಭಾವ ಸೃಷ್ಟಿಯಾಗುವ ಆತಂಕವು ಇದೆ ಎಂದು ಶಿವಕುಮಾರ್ ತಿಳಿಸಿದ್ದಾರೆ.
ಜನ, ಜಾನುವಾರುಗಳಿಗೆ ಕುಡಿಯುವ ನೀರು, ಅಗತ್ಯ ಮೇವು ಒದಗಿಸಲು ಹಾಗೂ ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ಜನರ ನೆರವಿಗೆ ಧಾವಿಸಲು ಕೇಂದ್ರ ಸರಕಾರ ಅಗತ್ಯ ಸಹಾಯಧನ ಬಿಡುಗಡೆ ಮಾಡಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೋರಿದ್ದಾರೆ.






