ಜನರಲ್ಲಿ ಗಾಂಧೀಜಿ, ಅಂಬೇಡ್ಕರ್ ಅವರ ಪ್ರಸ್ತುತತೆ ಬಗ್ಗೆ ಅರಿವು ಮೂಡಬೇಕು : ಸಿಎಂ ಸಿದ್ದರಾಮಯ್ಯ

ಬೆಳಗಾವಿ : ಜನರಲ್ಲಿ ಮಹಾತ್ಮಾ ಗಾಂಧೀಜಿ, ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರಸ್ತುತತೆ ಬಗ್ಗೆ ಅರಿವು ಮೂಡಬೇಕು. ಸಂವಿಧಾನ ರಕ್ಷಣೆ ಮಾಡುವುದು ಎಲ್ಲರ ಜವಾಬ್ದಾರಿ ಎನ್ನುವುದು ತಿಳಿಯಬೇಕು. ಸಂವಿಧಾನದವನ್ನು ನಾವು ರಕ್ಷಿಸಿದರೆ, ಸಂವಿಧಾನ ಭಾರತೀಯರನ್ನು ರಕ್ಷಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 1924ರ ಇಸವಿಯಲ್ಲಿ ಬೆಳಗಾವಿಯಲ್ಲಿ ಡಿಸೆಂಬರ್ ನಲ್ಲಿ ಕಾಂಗ್ರೆಸ್ ಅಧಿವೇಶನ ಮಹಾತ್ಮಾ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ನಡೆದಿತ್ತು. ಅಧಿವೇಶ ನಡೆದು ಒಂದು ಶತಮಾನವಾಗಿರುವ ಹಿನ್ನೆಲೆಯಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಈ ಸಂಬಂಧ ಎಲ್ಲಾ ಸಿದ್ಧತೆಗಳು ನಡೆದಿದ್ದು, ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೆವಾಲ ಅವರೊಂದಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕಳೆದ ನಾಲ್ಕೈದು ದಿನಗಳಿಂದ ಇಲ್ಲೇ ಇದ್ದು ಅಚ್ಚುಕಟ್ಟಾಗಿ ಸಿದ್ಧತೆಗಳನ್ನು ಕೈಗೊಂಡಿದ್ದಾರೆ. ಸುಮಾರು ಎರಡು ಲಕ್ಷಕ್ಕೂ ಹೆಚ್ಚು ಜನ ಇಲ್ಲಿ ಸೇರಲಿದ್ದಾರೆ. ಬೆಳಗಾವಿಯಲ್ಲಿ ಇದು ಐತಿಹಾಸಿಕ ಸಮಾವೇಶವಾಗಲಿದೆ ಎಂದರು.
ಪ್ರಹ್ಲಾದ್ ಜೋಶಿಗೆ ಇತಿಹಾಸದ ಬಗ್ಗೆ ತಿಳಿದಿಲ್ಲ :
ಕಾಂಗ್ರೆಸ್ ನವರು ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದು, ಅಧಿವೇಶನ ನಡೆಸಲು ಹಕ್ಕಿಲ್ಲ ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ, ಪ್ರಹ್ಲಾದ್ ಜೋಶಿ ಅವರಿಗೆ ಇತಿಹಾಸ ಗೊತ್ತಿಲ್ಲ. ಗೋಲ್ವಾಲ್ಕರ್ ಹಾಗೂ ಸಾವರ್ಕರ್ ಸಂವಿಧಾನ ಜಾರಿಯಾದಾಗ ಏನು ಮಾತನಾಡಿದ್ದರು ಎಂದು ತಿಳಿದಿದೆಯೇ ಅವರಿಗೆ ಎಂದು ಪ್ರಶ್ನಿಸಿದರು.





