ರಾಜ್ಯದ ಎಲ್ಲಾ ಶಾಸಕರಿಗೆ ತಲಾ 10 ಕೋಟಿ ರೂ. ಅನುದಾನ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಎಲ್ಲಾ ಪಕ್ಷಗಳ ಶಾಸಕರಿಗೆ ತಲಾ 10 ಕೋಟಿ ರೂ. ಅನುದಾನ ಘೋಷಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸೋಮವಾರ ಸಂಜೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಅವರು ಈ ಘೋಷಣೆ ಮಾಡಿದ್ದಾರೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ಅನುದಾನ ಕೊರತೆ ಬಗ್ಗೆ ಪ್ರಸ್ತಾಪ ಮಾಡಿದರು. ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, 'ರವಿವಾರವಷ್ಟೇ ಕಡತಕ್ಕೆ ಸಹಿ ಹಾಕಿದ್ದೇನೆ. ಕಾಂಗ್ರೆಸ್ ಶಾಸಕರು ಮಾತ್ರವಲ್ಲ, ರಾಜ್ಯದ ಎಲ್ಲಾ ಶಾಸಕರಿಗೂ ತಲಾ 10 ಕೋಟಿ ರೂ. ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗಿದೆ' ಎಂದು ಹೇಳಿದರು.
ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಕೆಲ ಶಾಸಕರು, 10 ಕೋಟಿ ರೂ. ಅನುದಾನ ಸಾಲದು, ಹೆಚ್ಚುವರಿ ಅನುದಾನ ಬಿಡುಗಡೆ ಮಾಡಬೇಕು ಎಂದು ಬೇಡಿಕೆ ಇಟ್ಟರು. ಇದಕ್ಕೆ ಸ್ಪಂದಿಸಿದ ಸಿದ್ದರಾಮಯ್ಯ, ಸದ್ಯಕ್ಕೆ 10 ಕೋಟಿ ರೂ. ಅನುದಾನ ಬಳಕೆ ಮಾಡಿ. ಹೆಚ್ಚುವರಿ ಅನುದಾನ ಬೇಕಿರುವವರು ಫೆಬ್ರವರಿಯಲ್ಲಿ ಪ್ರಸ್ತಾವ ಸಲ್ಲಿಸಿ. 2025-26ನೇ ಸಾಲಿನ ಬಜೆಟ್ ನಲ್ಲಿ ಅನುದಾನಕ್ಕೆ ಅವಕಾಶ ಮಾಡಿಕೊಡುವುದಾಗಿ ಭರವಸೆ ನೀಡಿದರು ಎಂದು ತಿಳಿದುಬಂದಿದೆ.





