ರಾಜ್ಯಪಾಲರಿಗೆ ಅಗೌರವ ಆರೋಪ : ಕಾಂಗ್ರೆಸ್ ಸದಸ್ಯರ ವಿರುದ್ಧ ಶಿಸ್ತು ಕ್ರಮಕ್ಕೆ ಆರ್.ಅಶೋಕ್ ಮನವಿ

ಆರ್.ಅಶೋಕ್
ಬೆಂಗಳೂರು: ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರಿಗೆ ಅಗೌರವ ತೋರಿದ ವಿಧಾನಸಭೆ ಹಾಗೂ ವಿಧಾನಪರಿಷತ್ ಸದಸ್ಯರ ವಿರುದ್ಧ ಕೂಡಲೇ ಶಿಸ್ತು ಕ್ರಮ ಜರುಗಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಭಾಧ್ಯಕ್ಷರಿಗೆ ಮನವಿ ಸಲ್ಲಿಸಿದ್ದಾರೆ.
ಈ ಕುರಿತು ನೀಡಿರುವ ಮನವಿಯಲ್ಲಿ, ಸಂವಿಧಾನದ 175ನೇ ಅನುಚ್ಛೇದದ ಪ್ರಕಾರ ಸದನದ ಆದೇಶವನ್ನು ಉಲ್ಲಂಘಿಸಿದ ಸದಸ್ಯರ ವಿರುದ್ಧ ಕಡ್ಡಾಯವಾಗಿ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಆಗಮಿಸಿ ಕೇವಲ ಒಂದು ಸಾಲಿನ ಭಾಷಣ ಓದಿ ನಿರ್ಗಮಿಸುತ್ತಿದ್ದ ವೇಳೆ, ವಿಧಾನಪರಿಷತ್ನ ಕಾಂಗ್ರೆಸ್ ಸದಸ್ಯರು ಅವರನ್ನು ತಡೆಯಲು ಮುಂದಾದರು. ಈ ಘಟನೆ ಸದನದ ಗೌರವಕ್ಕೆ ಧಕ್ಕೆ ತಂದಿದ್ದು, ಸಂವಿಧಾನಾತ್ಮಕ ಹುದ್ದೆಗೆ ಅಪಮಾನವಾಗಿದೆ ಎಂದು ಆರ್.ಅಶೋಕ್ ಆರೋಪಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಸಂಬಂಧಿಸಿದ ಸದಸ್ಯರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಅವರು ಸಭಾಧ್ಯಕ್ಷರಿಗೆ ಮನವಿ ಮಾಡಿದ್ದಾರೆ.





