ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ಹೋರಾಟ : ಡಿ.ಕೆ. ಶಿವಕುಮಾರ್

ಹೊಸದಿಲ್ಲಿ : ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಾವು ಮತಕಳ್ಳತನದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಇದರಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ರವಿವಾರ ದಿಲ್ಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಲೋಕಸಭಾ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ರಾಜ್ಯಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ನಾಯಕತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಾವು ಮತಕಳ್ಳತನ ವಿರುದ್ಧದ ಹೋರಾಟ ಆರಂಭಿಸಿದ್ದೆವು. ಇದೀಗ ರಾಮಲೀಲಾ ಮೈದಾನದಲ್ಲಿ ಪ್ರತಿಭಟನೆ ಮಾಡುತ್ತಿದ್ದೇವೆ ಎಂದು ಹೇಳಿದರು.
ಈ ದೇಶದಲ್ಲಿ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸಬೇಕು ಎಂಬ ಸಂದೇಶ ನೀಡಲಾಗುತ್ತಿದೆ. ದೇಶದ ಚುನಾವಣೆಗಳು ಈಗ ನ್ಯಾಯಸಮ್ಮತವಾಗಿಲ್ಲ. ಮತಕಳ್ಳತನ ಮಾಡಲಾಗುತ್ತಿದೆ. ಇದಕ್ಕೆ ಸಾವಿರಾರು ಉದಾಹರಣೆಗಳಿವೆ. ರಾಹುಲ್ ಗಾಂಧಿ ಈ ವಿಚಾರವಾಗಿ ಸಂಸತ್ತಿನಲ್ಲಿ ಧ್ವನಿ ಎತ್ತಿದ್ದಾರೆ. ಇನ್ನು ಹಲವು ಬಾರಿ ಮಾಧ್ಯಮಗೋಷ್ಠಿ ಮೂಲಕ ದಾಖಲೆಗಳನ್ನು ಬಹಿರಂಗಗೊಳಿಸಿದ್ದಾರೆ ಎಂದು ಅವರು ಹೇಳಿದರು.
ಇಷ್ಟಾದರೂ ಚುನಾವಣಾ ಆಯೋಗದಿಂದ ಸರಿಯಾದ ಉತ್ತರ ಸಿಗುತ್ತಿಲ್ಲ. ಹೀಗಾಗಿ ಸಾಂವಿಧಾನಿಕ ಸಂಸ್ಥೆಗಳ ದುರ್ಬಳಕೆ ಬಗ್ಗೆ ಜನರಿಗೆ ಅರಿವು ಮೂಡಿಸಲು ನಾವು ಬೀದಿಗಿಳಿದು ಹೋರಾಟ ಮಾಡುತ್ತಿದ್ದೇವೆ ಎಂದು ಶಿವಕುಮಾರ್ ತಿಳಿಸಿದರು.
ಸೋಲು, ಗೆಲುವಿಗೆ ಕಾಂಗ್ರೆಸಿಗರು ಯೋಚಿಸುವುದಿಲ್ಲ:
ಸೋಲಿನ ಹತಾಶೆಯಿಂದ ಕಾಂಗ್ರೆಸ್ ಈ ರೀತಿ ಸಮಾವೇಶ ಮಾಡುತ್ತಿದೆ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಉಪ ಮುಖ್ಯಮಂತ್ರಿ, “ಅವರು ತಮ್ಮ ಖುಷಿಗೆ ಏನು ಬೇಕಾದರೂ ಮಾತನಾಡುತ್ತಾರೆ. ನಾವು ಕಾಂಗ್ರೆಸಿಗರು ಸೋಲು, ಗೆಲುವಿನ ಬಗ್ಗೆ ಯೋಚನೆ ಮಾಡುವುದಿಲ್ಲ. ಈ ದೇಶಕ್ಕೆ ಸ್ವಾತಂತ್ರ್ಯ ಹಾಗೂ ಸಂವಿಧಾನ ತಂದು ಕೊಟ್ಟಾಗ ನಮ್ಮ ಹಿರಿಯರು ಸಾಕಷ್ಟು ಪ್ರಾಣತ್ಯಾಗ ಮಾಡಿದ್ದಾರೆ. ಈ ದೇಶದ ಆರ್ಥಿಕ ತಜ್ಞನಿಗೆ ಸೋನಿಯಾ ಗಾಂಧಿ ಅಧಿಕಾರ ತ್ಯಾಗ ಮಾಡಿದರು. ಇಂದಿರಾ ಗಾಂಧಿ ಹಾಗೂ ರಾಜೀವ್ ಗಾಂಧಿ ದೇಶಕ್ಕಾಗಿ ಪ್ರಾಣವನ್ನೇ ಅರ್ಪಿಸಿದರು. ಜವಾಹರ್ ಲಾಲ್ ನೆಹರೂ, ಗಾಂಧಿಜಿ ಸೇರಿದಂತೆ ಅನೇಕ ಮಹನೀಯರು ಜೈಲುವಾಸ ಅನುಭವಿಸಿದರು. ನೂರು ವರ್ಷಗಳ ಹಿಂದೆ ಮಹಾತ್ಮಾ ಗಾಂಧಿ ದೇಶದ ಸ್ವಾತಂತ್ರ್ಯ ಹೋರಾಟದ ನಾಯಕತ್ವ ವಹಿಸಿದರು. ಇಂದು ಪಕ್ಷ ಕಷ್ಟಕಾಲದಲ್ಲಿರುವಾಗ ಮಲ್ಲಿಕಾರ್ಜುನ ಖರ್ಗೆ ಪಕ್ಷದ ಅಧ್ಯಕ್ಷರಾಗಿದ್ದಾರೆ” ಎಂದು ತಿಳಿಸಿದರು.







