Bengaluru | ಏರ್ಪೋರ್ಟ್ನಲ್ಲಿ ಕ್ಯಾಂಡಿ, ಸಿಹಿ ಪದಾರ್ಥಗಳಲ್ಲಿ ಮಾದಕ ವಸ್ತು ಕಳ್ಳಸಾಗಣೆ: ಇಬ್ಬರ ಬಂಧನ

PC : x/@blrcustoms
ಬೆಂಗಳೂರು : ಇಲ್ಲಿನ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕ್ಯಾಂಡಿ ಹಾಗೂ ಸಿಹಿ ಪದಾರ್ಥಗಳಲ್ಲಿ ಅಡಗಿಸಿಟ್ಟು ಮಾದಕ ವಸ್ತು ಕಳ್ಳಸಾಗಣೆ ಮಾಡುತ್ತಿದ್ದ ಇಬ್ಬರು ಪ್ರಯಾಣಿಕರನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿ ಕೋಟ್ಯಂತರ ರೂ. ಮೌಲ್ಯದ ಮಾಲನ್ನು ಜಪ್ತಿ ಮಾಡಿದ್ದಾರೆ.
ಪ್ರತ್ಯೇಕ ಎರಡು ಪ್ರಕರಣಗಳಲ್ಲಿ 3.39 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಮತ್ತು 4.7 ಲಕ್ಷ ರೂ. ಮೌಲ್ಯದ ಚರಸ್ ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಫೆ.11ರಂದು ಬ್ಯಾಂಕಾಕ್ನಿಂದ ಬೆಂಗಳೂರಿಗೆ ಬಂದಿದ್ದ ಪ್ರಯಾಣಿಕನ ಲಗೇಜ್ ತಪಾಸಣೆ ವೇಳೆ 9.7 ಕೆ.ಜಿ. ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದೆ. ಇದರ ಮಾರುಕಟ್ಟೆ ಮೌಲ್ಯ ಸುಮಾರು 3.39 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಆರೋಪಿಯನ್ನು ತಕ್ಷಣವೇ ವಶಕ್ಕೆ ಪಡೆದು, ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಚರಸ್ ಕಳ್ಳಸಾಗಣೆ: ಇನ್ನೊಂದು ಪ್ರಕರಣದಲ್ಲಿ, ಫೆ.11ರಂದು ಬ್ಯಾಂಕಾಕ್ನಿಂದ ಆಗಮಿಸಿದ್ದ ಮತ್ತೊಬ್ಬ ಪ್ರಯಾಣಿಕ ಕ್ಯಾಂಡಿ ಪ್ಯಾಕೆಟ್ಗಳಲ್ಲಿ ಅಡಗಿಸಿ ಮಾದಕ ವಸ್ತುವಾದ ಚರಸ್/ಹಶೀಶ್ ಸಾಗಿಸುತ್ತಿರುವುದನ್ನು ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಈ ವೇಳೆ ಸುಮಾರು 1.7 ಕೆ.ಜಿ. ಮಾದಕ ವಸ್ತು ವಶಪಡಿಸಿಕೊಳ್ಳಲಾಗಿದೆ. ಅದರ ಮೌಲ್ಯ ಸುಮಾರು 4.7 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ಆರೋಪಿಯನ್ನು ಎನ್ಡಿಪಿಎಸ್ ಕಾಯ್ದೆಯಡಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.







