ಜಿಬಿಎನ ಐದು ನಗರ ಪಾಲಿಕೆಗಳ ಚುನಾವಣೆ ನಡೆಸಲು ಅಧಿಕಾರಿಗಳ ನೇಮಕ

ಬೆಂಗಳೂರು, ಅ.14: ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ) ವ್ಯಾಪ್ತಿಗೆ ಬರುವ ಐದು ನಗರ ಪಾಲಿಕೆಗಳಿಗೆ ಚುನಾವಣೆ ನಡೆಸಲು ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಅಪರ ಜಿಲ್ಲಾ ಚುನಾವಣಾ ಅಧಿಕಾರಿಗಳನ್ನು ನೇಮಕ ಮಾಡಿ ರಾಜ್ಯ ಚುನಾವಣಾ ಆಯೋಗ ಮಂಗಳವಾರ ಆದೇಶ ಹೊರಡಿಸಿದೆ.
ಬೆಂಗಳೂರು ಕೇಂದ್ರ, ಉತ್ತರ, ದಕ್ಷಿಣ, ಪೂರ್ವ, ಪಶ್ಚಿಮ ನಗರ ಪಾಲಿಕೆಯ ಎಲ್ಲ ವಾರ್ಡ್‍ಗಳಿಗೆ ಜಿಬಿಎ ಆಯುಕ್ತ ಮಹೇಶ್ವರ ರಾವ್ ಅವರನ್ನು ಜಿಲ್ಲಾ ಚುನಾವಣಾ ಅಧಿಕಾರಿ ಎಂದು ನೇಮಕ ಮಾಡಲಾಗಿದೆ. ಚುನಾವಣಾ ಸಂಬಂಧಿತ ಎಲ್ಲ ಕಾರ್ಯಗಳನ್ನು ನಿರ್ವಹಿಸಲು ಆಯಾ ನಗರ ಪಾಲಿಕೆಗಳ ಆಯುಕ್ತರನ್ನೇ ಅಪರ ಜಿಲ್ಲಾ ಚುನಾವಣಾ ಅಧಿಕಾರಿಗಳೆಂದು ನೇಮಿಸಲಾಗಿದೆ.
2011ರ ಜನಗಣತಿಯನ್ನು ಆಧಾರವಾಗಿಟ್ಟುಕೊಂಡು, ಈ ಹಿಂದೆ 198 ವಾರ್ಡ್‍ಗಳನ್ನು ಹೊಂದಿದ್ದ ಬಿಬಿಎಂಪಿಯನ್ನು 368 ವಾರ್ಡ್‍ಗಳಾಗಿ ಪುನರ್ ವಿಂಗಡಿ ಐದು ಪಾಲಿಕೆಗಳಿರುವ ಜಿಬಿಎ ಅನ್ನು ರಚಿಸಲಾಗಿದೆ. ಈಗ ಬೆಂಗಳೂರು ಪಶ್ಚಿಮ ನಗರ ಪಾಲಿಕೆಯ 111 ವಾರ್ಡ್, ಬೆಂಗಳೂರು ದಕ್ಷಿಣ ನಗರ ಪಾಲಿಕೆಯ 72 ವಾರ್ಡ್, ಬೆಂಗಳೂರು ಉತ್ತರ ನಗರ ಪಾಲಿಕೆಯ 72 ವಾರ್ಡ್, ಬೆಂಗಳೂರು ಕೇಂದ್ರ ನಗರ ಪಾಲಿಕೆಯ 63 ವಾರ್ಡ್, ಬೆಂಗಳೂರು ಪೂರ್ವ ನಗರ ಪಾಲಿಕೆಯ 50 ವಾರ್ಡ್ ಸೇರಿ 368 ವಾರ್ಡ್‍ಗಳಿಗೆ ಚುನಾವಣೆ ನಡೆಯಲಿದೆ.







