ಜು.9ರ ಮುಷ್ಕರಕ್ಕೆ ಸರಕಾರಿ ನೌಕರರ ಒಕ್ಕೂಟ ಬೆಂಬಲ: ಜೈಕುಮಾರ್

ಸಾಂದರ್ಭಿಕ ಚಿತ್ರ
ಬೆಂಗಳೂರು : ಕೇಂದ್ರ ಸರಕಾರದ ನೌಕರ-ಕಾರ್ಮಿಕ ಮತ್ತು ಜನವಿರೋಧಿ ನೀತಿಗಳ ವಿರುದ್ಧ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ಜು.9ರಂದು ಕರೆ ನೀಡಿರುವ ಅಖಿಲ ಭಾರತ ಮುಷ್ಕರಕ್ಕೆ ಅಖಿಲ ಕರ್ನಾಟಕ ರಾಜ್ಯ ಸರಕಾರಿ ನೌಕರರ ಒಕ್ಕೂಟ ಬೆಂಬಲಿಸಲಿದೆ ಎಂದು ಒಕ್ಕೂಟದ ಅಧ್ಯಕ್ಷ ಎಚ್.ಎಸ್.ಜೈಕುಮಾರ್ ತಿಳಿಸಿದ್ದಾರೆ.
ಸೋಮವಾರ ಈ ಕುರಿತು ಪ್ರಕಟನೆ ನೀಡಿರುವ ಅವರು, ಎನ್ಪಿಎಸ್, ಯುಪಿಎಸ್, ಪಿಎಫ್ಆರ್ಡಿಎ ಕಾಯ್ದೆಯನ್ನು ರದ್ದುಗೊಳಿಸಿ, ನಿಶ್ಚಿತ ಹಳೆಯ ಪಿಂಚಣಿ (ಒಪಿಎಸ್)ನ್ನು ಮರುಸ್ಥಾಪಿಸಬೇಕು. ರಾಜ್ಯ ಮತ್ತು ಕೇಂದ್ರ ಸರಕಾರದಲ್ಲಿ ಖಾಲಿ ಇರುವ ಎಲ್ಲ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಪ್ರಸ್ತುತ ರಾಜ್ಯ ಸರಕಾರದ ವಿವಿಧ ಇಲಾಖೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಗುತ್ತಿಗೆ, ಹೊರ ಗುತ್ತಿಗೆ ಕಾರ್ಮಿಕರಿಗೆ, ಅತಿಥಿ ನೌಕರರಿಗೆ ಸೇವಾ ಭದ್ರತೆಯನ್ನು ಒದಗಿಸಬೇಕು. ಮಹಿಳಾ ನೌಕರರ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಬೇಕು. ಕಾರ್ಮಿಕ ವಿರೋಧಿ 4 ಸಂಹಿತೆಗಳನ್ನು ಹಿಂಪಡೆಯಬೇಕು. ಕೋವಿಡ್ ಸಂದರ್ಭದಲ್ಲಿ ಮುಟ್ಟುಗೋಲು ಹಾಕಿಕೊಂಡಿರುವ 18 ತಿಂಗಳ ತುಟ್ಟಿ ಭತ್ಯೆಯನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ನಿಯಮಾನುಸಾರ 5ವರ್ಷಗಳಿಗೊಮ್ಮೆ ವೇತನ ಆಯೋಗವನ್ನು ರಚನೆ ಮಾಡಬೇಕು. ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದುಗೊಳಿಸಬೇಕು. ಸಂವಿಧಾನದಲ್ಲಿರುವ ಧರ್ಮ ನಿರಪೇಕ್ಷತೆಯನ್ನು ಎತ್ತಿಹಿಡಿದು, ಎಲ್ಲ ರೀತಿಯ ಮತೀಯವಾದವನ್ನು ಹಿಮ್ಮೆಟ್ಟಿಸಬೇಕು ಎಂದು ತಿಳಿಸಿದ್ದಾರೆ.







