ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳ ಬೋಧಕ ಸಿಬ್ಬಂದಿಯನ್ನು ಆಡಳಿತಾತ್ಮಕ ಹುದ್ದೆಗಳಿಗೆ ನಿಯೋಜಿಸದಂತೆ ಸರಕಾರದ ಆದೇಶ

ಬೆಂಗಳೂರು : ರಾಜ್ಯ ಸರಕಾರವು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರುವ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುವ ಬೋಧಕ ಸಿಬ್ಬಂದಿಗಳನ್ನು ಬೋಧನೆಯನ್ನು ಹೊರತುಪಡಿಸಿ, ಆಡಳಿತಾತ್ಮಕ ಹುದ್ದೆಗಳಿಗೆ ಹಾಗೂ ಇತರೆ ಉದ್ದೇಶಗಳಿಗೆ ನಿಯೋಜಿಸದಂತೆ ಆದೇಶಿಸಿದೆ.
ಈ ಸಂಬಂಧ ಅಲ್ಪಸಂಖ್ಯಾತರ ಕಲ್ಯಾಣ ಹಜ್ ಮತ್ತು ವಕ್ಫ್ ಇಲಾಖೆಯ ಸರಕಾರದ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್ ಸುತ್ತೋಲೆ ಹೊರಡಿಸಿದ್ದು, ಯಾವುದೇ ಇಲಾಖೆಯಲ್ಲಿಯಾದರೂ ಕೆಳದರ್ಜೆಯ ಅಧಿಕಾರಿಗಳನ್ನು ಮೇಲ್ದರ್ಜೆಯ ಹುದ್ದೆಗೆ ಸ್ವಂತ ವೇತನ ಶ್ರೇಣಿಯ ಆಧಾರದ ಮೇಲೆ ನೇಮಕ ಮಾಡುವುದನ್ನು/ನಿಯೋಜನೆಗೊಳಿಸುವುದನ್ನು ನಿರ್ಬಂಧಿಸಿದೆ ಎಂದಿದ್ದಾರೆ.
ಹೀಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಶಾಲಾ/ಕಾಲೇಜುಗಳಲ್ಲಿ ಬೋಧಿಸುತ್ತಿರುವ ಪ್ರಾಂಶುಪಾಲರು, ಉಪನ್ಯಾಸಕರು, ಶಿಕ್ಷಕರನ್ನು ಬೋಧನೆಯನ್ನು ಹೊರತುಪಡಿಸಿ, ಆಡಳಿತಾತ್ಮಕ ಹುದ್ದೆಗಳಾದ ಸಹಾಯಕ ನಿರ್ದೇಶಕರು, ಜಿಲ್ಲಾಧಿಕಾರಿ, ತಾಲ್ಲೂಕು ವಿಸ್ತರಣಾಧಿಕಾರಿ, ನಿಲಯಪಾಲಕರುಗಳ ಹುದ್ದೆಗಳಿಗೆ ನಿಯೋಜಿಸಿರುವುದನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಿದೆ. ಅದರಂತೆ, ತಮ್ಮ ಮೂಲ ಹುದ್ದೆಗಳಿಗೆ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಬೇಕು ಎಂದು ಆದೇಶಿಸಲಾಗಿದೆ.
ಬೋಧಕೇತರ ಗ್ರೂಪ್-ಸಿ ವೃಂದದ ನಿಲಯಪಾಲಕರು ಪ್ರಥಮ ದರ್ಜೆ ಸಹಾಯಕರು, ದ್ವಿತೀಯ ದರ್ಜೆ ಸಹಾಯಕರು, ಗಣಕಯಂತ್ರ ಸಹಾಯಕರು, ಬೋಧಕೇತರ ಸಿಬ್ಬಂದಿಗಳನ್ನು ಮೇಲ್ದರ್ಜೆಯ ಹುದ್ದೆಗಳಾದ ತಾಲ್ಲೂಕು ವಿಸ್ತರಣಾಧಿಕಾರಿ ಹುದ್ದೆಗಳಿಗೆ ಸ್ವಂತ ವೇತನ ಶ್ರೇಣಿಯ ಮೇಲೆ ನೇಮಿಸಿರುವುದನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಿದೆ. ಬೋಧಕ, ಬೋಧಕೇತರ ಸಿಬ್ಬಂದಿಗಳನ್ನು ಸಂಬಂಧಪಟ್ಟ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿಗಳು ಕರ್ತವ್ಯದಿಂದ ಕೂಡಲೇ ಬಿಡುಗಡೆಗೊಳಿಸಬೇಕು ಎಂದು ತಿಳಿಸಿದ್ದಾರೆ.
ಇಲಾಖೆಯ ಸೂಚನೆಗಳನ್ನು ಉಲ್ಲಂಘಿಸಿ, ನಿಯೋಜನೆ, ಹೆಚ್ಚುವರಿ ಪ್ರಭಾರ, ವರ್ಗಾಯಿಸಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ನಿಯಮಾನುಸಾರ ಶಿಸ್ತುಕ್ರಮ ಜರುಗಿಸಲು ಕ್ರಮವಹಿಸಲಾಗುವುದು. ಈ ರೀತಿ ಪ್ರಕರಣಗಳು ಕಂಡುಬಂದಲ್ಲಿ ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರು ಸರಕಾರಕ್ಕೆ ವರದಿಯನ್ನು ಸಲ್ಲಿಸಬೇಕು ಎಂದು ಸೂಚನೆ ನೀಡಲಾಗಿದೆ.






