ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಅಗತ್ಯವಿರುವ ಎಲ್ಲಾ ಕ್ರಮ ಕೈಕೊಂಡಿದ್ದೇವೆ : ಜಿ.ಪರಮೇಶ್ವರ್

ಜಿ.ಪರಮೇಶ್ವರ್
ಹುಬ್ಬಳ್ಳಿ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಕೊಂಡಿದ್ದೇವೆ. ಸಮಯ ಬಂದಾಗ ಅಂಕಿ ಸಂಖ್ಯೆ ಸಮೇತ ಕೇಂದ್ರ ಸಚಿವ ವಿ.ಸೋಮಣ್ಣ ಅವರಿಗೆ ಮಾಹಿತಿ ನೀಡುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪೊಲೀಸರಿಗೆ ಸ್ವತಂತ್ರವಾಗಿ ಕೆಲಸ ಮಾಡಲು ಅವಕಾಶ ಕೊಡಬೇಕು ಎಂದು ಕೇಂದ್ರ ಸಚಿವ ವಿ.ಸೋಮಣ್ಣ ನೀಡಿದ ಹೇಳಿಕೆಗೆ ಈ ಮೇಲಿನಂತೆ ಪ್ರತಿಕ್ರಿಯಿಸಿದರು.
ಮಂಗಳೂರಿನಲ್ಲಿ ಕೋಮು ಹತ್ಯೆಗಳ ವಿಚಾರದ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ್, ಕಾನೂನು ಕಠಿಣವಾಗಿದ್ದರೂ ಕೂಡ ಈ ರೀತಿಯ ಘಟನೆಗಳು ನಡೆಯುತ್ತಿವೆ. ಆದರೂ, ಅವುಗಳನ್ನು ಹತ್ತಿಕ್ಕಲು ನಾವು ಕ್ರಮಗಳನ್ನು ಕೈಗೊಳ್ಳುತ್ತಿದ್ದೇವೆ. ನಾನು ಇಲ್ಲಿ ಯಾರನ್ನೂ ದೂಷಿಸುವುದಿಲ್ಲ. ಕಾನೂನು ಮೀರಿ ಕೆಲಸ ಮಾಡಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.
ಕೆಲವರಿಗೆ ಕೊಲೆ ಬೆದರಿಕೆಗಳು ಬರುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ಪರಿಶೀಲನೆ ಮಾಡುತ್ತೇವೆ. ಅಲ್ಲದೇ, ಕರಾವಳಿ ಭಾಗದಲ್ಲಿ ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ರಚನೆ ಬಗತ್ಗೆ ಇನ್ನೂ ಸಮಯ ನಿರ್ಧಾರ ಮಾಡಿಲ್ಲ. ಆ ಕಾರ್ಯಪಡೆಯ ಅಧಿಕಾರ ವ್ಯಾಪ್ತಿ, ಸಂಖ್ಯಾಬಲ ಎಷ್ಟಿರಬೇಕು ಎಂಬುದರ ಬಗ್ಗೆ ಚರ್ಚೆ ಮಾಡಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.





