ಗೃಹ ಜ್ಯೋತಿ ಸಮೀಕ್ಷೆ: ಅ.31ರೊಳಗೆ ದಾಖಲೆ ಸಲ್ಲಿಸಲು ಬೆಸ್ಕಾಂ ಮನವಿ

ಬೆಂಗಳೂರು : ಬೆಸ್ಕಾಂ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಗೃಹ ಜ್ಯೋತಿ ಫಲಾನುಭವಿಗಳ ಮನೆಮನೆ ಸಮೀಕ್ಷೆಯ ಗಡುವು ಅಕ್ಟೋಬರ್ 31ಕ್ಕೆ ಮುಕ್ತಾಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಸಮೀಕ್ಷೆಯಲ್ಲಿ ಪಾಲ್ಗೊಳ್ಳದ ಗ್ರಾಹಕರು ಅಗತ್ಯ ದಾಖಲೆಗಳನ್ನು ಬೆಸ್ಕಾಂ ಉಪವಿಭಾಗ ಕಚೇರಿಗೆ ಖುದ್ದಾಗಿ ತೆರಳಿ ಸಲ್ಲಿಸುವಂತೆ ಬೆಸ್ಕಾಂ ಮನವಿ ಮಾಡಿದೆ.
ಕಳೆದ ಮೂರೂವರೆ ತಿಂಗಳಿನಿಂದ ಸಮೀಕ್ಷೆ ನಡೆಯುತ್ತಿದ್ದು, ಮನೆಗೆ ಬೀಗ ಹಾಕಿರುವ, ಮನೆ ಖಾಲಿ ಇರುವ ಹಾಗೂ ವಿವಿಧ ಕಾರಣಗಳಿಂದ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗದ ಗ್ರಾಹಕರಿಗೆ ಬೆಸ್ಕಾಂ ಕಚೇರಿಗೆ ತೆರಳಿ ದಾಖಲೆಗಳನ್ನು ಸಲ್ಲಿಸಲು ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದೆ. ನಿಗದಿತ ಗಡುವಿನೊಳಗೆ ದಾಖಲೆಗಳನ್ನು ಸಲ್ಲಿಸುವಂತೆ ಬೆಸ್ಕಾಂ ಮನವಿ ಮಾಡಿದ್ದು, ದಾಖಲೆ ಸಲ್ಲಿಸಲು ಅಕ್ಟೋಬರ್ 31 ಕೊನೆಯ ಅವಕಾಶವಾಗಿದೆ ಎಂದು ಸ್ಪಷ್ಟಪಡಿಸಿದೆ.
ಬೆಸ್ಕಾಂನ ಎಂಟು ಜಿಲ್ಲೆಗಳ ವ್ಯಾಪ್ತಿಯಲ್ಲಿ ಭಾಗ್ಯ ಜ್ಯೋತಿ, ಕುಟೀರ ಜ್ಯೋತಿ ಹಾಗೂ ಅಮೃತ ಜ್ಯೋತಿ ಯೋಜನೆಗಳ ಗ್ರಾಹಕರು ಸೇರಿದಂತೆ ಒಟ್ಟು 74,29,773 ಗೃಹ ಜ್ಯೋತಿ ಫಲಾನುಭವಿಗಳಿದ್ದಾರೆ. ಈ ಪೈಕಿ ಅಕ್ಟೋಬರ್ 22ರ ವೇಳೆಗೆ 73,17,687 ಗ್ರಾಹಕರ ಸಮೀಕ್ಷೆ ಪೂರ್ಣಗೊಂಡಿದ್ದು, ಶೇ.98.49ರಷ್ಟು ಪ್ರಗತಿ ಸಾಧಿಸಲಾಗಿದೆ.
ಸಮೀಕ್ಷೆಯ ಸಂದರ್ಭದಲ್ಲಿ ಬೀಗ ಹಾಕಿರುವ ಹಾಗೂ ಖಾಲಿ ಇರುವ ಮನೆಗಳಿಗೆ ಬೆಸ್ಕಾಂ ಸಿಬ್ಬಂದಿ ಮೂರು ಬಾರಿ ಭೇಟಿ ನೀಡಿದ್ದಾರೆ. ಅಲ್ಲದೆ, ಇಂತಹ ಮನೆಗಳ ಗ್ರಾಹಕರ ಮೊಬೈಲ್ಗಳಿಗೆ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವಂತೆ ಸಂದೇಶಗಳನ್ನೂ ಕಳುಹಿಸಲಾಗಿದೆ.
ಈ ವರ್ಗದ ಗ್ರಾಹಕರು ಅಗತ್ಯ ದಾಖಲೆಗಳನ್ನು ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನಾಂಕವಾಗಿದ್ದು, ಗಡುವನ್ನು ವಿಸ್ತರಿಸುವುದಿಲ್ಲ ಎಂದು ಬೆಸ್ಕಾಂ ಸ್ಪಷ್ಟಪಡಿಸಿದೆ. ಹೀಗಾಗಿ ಸಮೀಕ್ಷೆಯಲ್ಲಿ ಪಾಲ್ಗೊಳ್ಳದ ಗ್ರಾಹಕರು ನಿಗದಿತ ಅವಧಿಯೊಳಗೆ ಬೆಸ್ಕಾಂ ಉಪವಿಭಾಗ ಕಚೇರಿಗೆ ತೆರಳಿ ದಾಖಲೆಗಳನ್ನು ಸಲ್ಲಿಸುವಂತೆ ಮನವಿ ಮಾಡಲಾಗಿದೆ.






