ಬಂಟ್ವಾಳ ಯುವತಿ ಕೊಲೆಗೆ ಸಂಬಂಧಿಸಿದ ಫೇಸ್‌ಬುಕ್ ಪೋಸ್ಟ್ ಹಾಕಿದವರ ವಿರುದ್ಧ ಕ್ರಿಮಿನಲ್ ಕೇಸ್; ಪೊಲೀಸರ ಕ್ರಮಕ್ಕೆ ಹೈಕೋರ್ಟ್ ಕಿಡಿ

ಬೆಂಗಳೂರು : ಬಂಟ್ವಾಳ ಬಸ್ ನಿಲ್ದಾಣದಲ್ಲಿ ನಡೆದಿದ್ದ ಯುವತಿಯ ಹತ್ಯೆ ವಿಚಾರವಾಗಿ ನ್ಯೂಸ್ ಪೋರ್ಟಲ್‌ನಲ್ಲಿ ಪ್ರಕಟವಾದ ವ್ಯಂಗ್ಯ ಚಿತ್ರವನ್ನು ಟೀಕಿಸಿದ ಆರೋಪದಲ್ಲಿ ವ್ಯಕ್ತಿಯೊಬ್ಬರ ವಿರುದ್ಧ ಎಫ್ಐಆರ್ ದಾಖಲಿಸಿದ ಪೊಲೀಸರ ಕ್ರಮಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ಸರ್ಕಾರ ಕೊಲೆಗಾರರನ್ನು ಹಿಡಿಯದೆ, ಅವರ ಬಗ್ಗೆ ಬರೆದವರ ಮೇಲೆ ಪ್ರಕರಣ ದಾಖಲಿಸುವುದೇ ಆಗಿದೆ ಎಂದು ಕಿಡಿಕಾರಿದೆ.
ಪಣಂಬೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಮಂಗಳೂರಿನ ಕದ್ರಿ ನಿವಾಸಿ ಪ್ರದೀಪ್ ಸರಿಪಳ್ಳ ಎಂಬುವರು ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಪೊಲೀಸರ ಕಾರ್ಯವೈಖರಿಗೆ ಅಸಮಾಧಾನ ವ್ಯಕ್ತಪಡಿಸಿತು.
ಇದೇ ವೇಳೆ, ಅರ್ಜಿದಾರರ ವಿರುದ್ಧದ ಎಫ್ಐಆರ್‌ಗೆ ಮಧ್ಯಂತರ ತಡೆಯಾಜ್ಞೆ ನೀಡಿದ ನ್ಯಾಯಪೀಠ, ಪ್ರತಿವಾದಿಗಳಾದ ಪಣಂಬೂರು ಠಾಣೆ ಪೊಲೀಸರು ಹಾಗೂ ದೂರುದಾರರಾದ ಮಂಗಳೂರು ನಿವಾಸಿ ಮೊಹಮ್ಮದ್ ಮುನೀಮ್ ಎಂಬುವರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.




