ಶಿವಶಂಕರಪ್ಪ ಸಾಹುಕಾರ್ ನಿರೀಕ್ಷಣಾ ಜಾಮೀನು ಅರ್ಜಿ; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು : ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಕರ್ನಾಟಕ ಲೋಕ ಸೇವಾ ಆಯೋಗದ (ಕೆಪಿಎಸ್‌ಸಿ) ಅಧ್ಯಕ್ಷರಾಗಿದ್ದ ಶಿವಶಂಕರಪ್ಪ ಎಸ್. ಸಾಹುಕಾರ್ ಸಲ್ಲಿಸಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಶಿವಶಂಕರಪ್ಪ ಸಾಹುಕಾರ್ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠ, ಪ್ರತಿವಾದಿ ಸರ್ಕಾರಕ್ಕೆ (ವಿಧಾನಸೌಧ ಠಾಣೆ ಪೊಲೀಸರು) ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಆಗಸ್ಟ್ 18ಕ್ಕೆ ಮುಂದೂಡಿತು.
ಪ್ರಕರಣದ ಹಿನ್ನೆಲೆ:
ಪಶುವೈದ್ಯಾಧಿಕಾರಿ ಡಾ. ಮಂಜುನಾಥ್ 2026ರ ಜುಲೈ 25ರಂದು ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿ, ಕೆಪಿಎಸ್‌ಸಿ ನಡೆಸಿರುವ 400 ಪಶುವೈದ್ಯಾಧಿಕಾರಿಗಳ ಹುದ್ದೆಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿ 2026ರ ಜುಲೈ 17ರಂದು ಪ್ರಕಟವಾಗಿದೆ. ಅದರಲ್ಲಿ ಉನ್ನತ ಶ್ರೇಣಿ ಪಡೆದಿರುವ ಹಲವು ಅಭ್ಯರ್ಥಿಗಳು ಕೆಪಿಎಸ್‌ಸಿಯ ಹಾಲಿ ಅಧ್ಯಕ್ಷರು, ಸದಸ್ಯರು ಮತ್ತು ಸಿಬ್ಬಂದಿಯ ಸಂಬಂಧಿಕರಾಗಿದ್ದಾರೆ. ಅವರು ಪರೀಕ್ಷೆ ನಡೆಯುವ ಎರಡು ದಿನ ಮುನ್ನ ಫೋನ್‌ಗಳನ್ನು ಸ್ವಿಚ್ ಆಫ್ ಮಾಡಿದ್ದರು. ಅವರನ್ನು ರೆಸಾರ್ಟ್‌ಗೆ ಕರೆದೊಯ್ದು ಪ್ರಶ್ನೆಗಳನ್ನು ನೀಡಿ ತರಬೇತಿ ನೀಡಲಾಗಿದೆ. ಇನ್ನೂ ಕೆಲ ಅಭ್ಯರ್ಥಿಗಳ ಒಎಂಆರ್ ಶೀಟ್ ತಿದ್ದಲಾಗಿದೆ. ಈ ಹಗರಣದ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ಕೋರಿದ್ದರು.
ಪ್ರಕರಣವನ್ನು ಸರ್ಕಾರ ಸಿಐಡಿ ತನಿಖೆಗೆ ವಹಿಸಿತ್ತು. ಇದರಿಂದ, ಬಂಧನ ಭೀತಿ ಎದುರಿಸುತ್ತಿದ್ದ ಶಿವಶಂಕರಪ್ಪ ಸಾಹುಕಾರ್ ನಿರೀಕ್ಷಣಾ ಜಾಮೀನು ಕೋರಿ 52ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯನ್ನು ಆಗಸ್ಟ್ 11ರಂದು ವಜಾಗೊಳಿಸಿದ್ದ ನ್ಯಾಯಾಲಯ, ಪ್ರಕರಣದಲ್ಲಿನ ಆರೋಪಗಳು ಗಂಭೀರವಾಗಿದ್ದು, ಸದ್ಯ ತನಿಖೆ ನಡೆಯುತ್ತಿದೆ. ಈ ಹಂತದಲ್ಲಿ ಜಾಮೀನು ನೀಡಲಾಗದು ಎಂದು ಅಭಿಪ್ರಾಯಪಟ್ಟು ನಿರೀಕ್ಷಣಾ ಜಾಮೀನು ನಿರಾಕರಿಸಿತ್ತು. ಇದರಿಂದ, ಶಿವಶಂಕರಪ್ಪ ಸಾಹುಕಾರ್ ಹೈಕೊರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.






