ಹುಲಿಕಲ್ ಘಾಟ್ನಲ್ಲಿ ಮಣ್ಣುಕುಸಿತ | ಮೃತ ಕಾರ್ಮಿಕರ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂ. ಪರಿಹಾರ : ಸಿಎಂ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ
ಬೆಂಗಳೂರು: ರಸ್ತೆ ಅಗಲೀಕರಣ ಕಾಮಗಾರಿ ವೇಳೆ ಮಣ್ಣು ಕುಸಿದು ಮೂವರು ಕಾರ್ಮಿಕರು ಮೃತಪಟ್ಟಿರುವ ಘಟನೆ ಕುರಿತು ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿದ ಅವರು, ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಹುಲಿಕಲ್ ಘಾಟಿ ತಿರುವಿನಲ್ಲಿ ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿ ವೇಳೆ ಮಣ್ಣು ಕುಸಿದು ಮೂವರು ಕಾರ್ಮಿಕರು ಮೃತಪಟ್ಟ ಸುದ್ದಿ ಕೇಳಿ ದುಃಖವಾಗಿದೆ ಎಂದು ತಿಳಿಸಿದ್ದಾರೆ.
ಮೃತ ಕಾರ್ಮಿಕರ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಕುಟುಂಬ ಸದಸ್ಯರಿಗೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಅವರು ಪ್ರಾರ್ಥಿಸಿದ್ದಾರೆ.
ಘಟನೆ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರೊಂದಿಗೆ ಮಾತುಕತೆ ನಡೆಸಿ ಮಾಹಿತಿ ಪಡೆದಿರುವುದಾಗಿ ತಿಳಿಸಿದ್ದಾರೆ.
ಕುಟುಂಬಕ್ಕೆ ಆಧಾರವಾಗಿದ್ದ ದುಡಿಯುವ ಜೀವಗಳು ಈ ಘಟನೆಯಲ್ಲಿ ಬಲಿಯಾಗಿದ್ದು, ಮಾನವೀಯ ನೆಲೆಯಲ್ಲಿ ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.







