ಬೆಂಗಳೂರು ವಿಮಾನ ನಿಲ್ದಾಣದಲ್ಲಿ 1.07 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ದೇವನಹಳ್ಳಿ: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ 1.07 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಥೈಲ್ಯಾಂಡ್‌ನ ಪುಕೆಟ್‌ನಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಪ್ರಯಾಣಿಕರನ್ನು ಕಸ್ಟಮ್ಸ್ ಅಧಿಕಾರಿಗಳು ತೀವ್ರ ತಪಾಸಣೆಗೆ ಒಳಪಡಿಸಿದ್ದರು. ಈ ವೇಳೆ ಓರ್ವ ಪ್ರಯಾಣಿಕನ ನಡವಳಿಕೆ ಅನುಮಾನಾಸ್ಪದವಾಗಿ ಕಂಡು ಬಂದ ಹಿನ್ನೆಲೆಯಲ್ಲಿ ಆತನ ಲಗೇಜ್ ಬ್ಯಾಗ್ ಅನ್ನು ಪರಿಶೀಲಿಸಿದಾಗ ಹೈಡ್ರೋಪೋನಿಕ್ ಗಾಂಜಾ ಸಾಗಿಸುತ್ತಿರುವುದು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.
ಪ್ರಯಾಣಿಕನ ಲಗೇಜ್‌ನಲ್ಲಿ ಸುಮಾರು 3.05 ಕೆಜಿ ತೂಕದ ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದ್ದು, ಅದರ ಅಂದಾಜು ಮೌಲ್ಯ 1.07 ಕೋಟಿ ರೂ. ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಂಜಾವನ್ನು ವಶಪಡಿಸಿಕೊಂಡು ಪ್ರಯಾಣಿಕನನ್ನು ಬಂಧಿಸಲಾಗಿದೆ.
ಆರೋಪಿಯನ್ನು ವಶಕ್ಕೆ ಪಡೆದಿರುವ ಕಸ್ಟಮ್ಸ್ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದು, ಎನ್‌ಡಿಪಿಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.






